ವಿಜಯವಾಣಿ ಸುದ್ದಿಜಾಲ ಧಾರವಾಡ
ಅತಿಕ್ರಮಣ ತೆರವು ಕಾರ್ಯಾಚರಣೆ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡಿರುವ ಕ್ರಮ ಖಂಡಿಸಿ ಎಐಸಿಸಿ ಸದಸ್ಯ ದೀಪಕ ಚಿಂಚೋರೆ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಕಲಾಭವನದಿಂದ ರ‌್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಪಾಲಿಕೆ ಅಧಿಕಾರಿಗಳು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಬಡ ಬೀದಿ ವ್ಯಾಪರಸ್ಥರನ್ನು ತರವು ಮಾಡುವ ಕೆಲಸ ಮಾಡಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿ ಹಲವು ದಿನಗಳಾದರೂ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೀದಿ ಬದಿ ವ್ಯಾಪಾರಸ್ಥರಿಗೆ ಪಾಲಿಕೆಯಿಂದ ದೊರಕುವ ಸೌಲಭ್ಯಗಳು ಸಮರ್ಪಕವಾಗಿ ನೀಡಿ ಪಾಲಿಕೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಡಬ್ಬಾ ಅಂಗಡಿ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಸಮರ್ಪಕ ಜಾಗೆ ನೀಡಿ ವ್ಯಾಪಾರಕ್ಕೆ ಅನುಕೂಲ ಕಲ್ಪಿಸಬೇಕು. ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳದೇ ಇದ್ದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುದುವುದು. ಜನರಿಗೆ ತೊಂದರೆ ಆದಲ್ಲಿ ಪಾಲಿಕೆ ಅಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಸಿದರು.
ವಸಂತ ಅರ್ಕಾಚಾರ, ಸತೀಶ ತುರಮರಿ, ಬೀದಿ ಬದಿ ವ್ಯಾಪಾರಸ್ಥರು, ಇತರರು ಇದ್ದರು.