ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮ ತೊಳಸಿಕೆರೆಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಮಂಗಳವಾರ ಗ್ರಾಪಂ ಮಾಜಿ ಸದಸ್ಯ ಕೆಂಪೇಗೌಡ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಅರಣ್ಯ ಪ್ರದೇಶದಿಂದ ಕೂಡಿರುವ ಮ.ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಆಗಮಿಸಿದ ಸುಮಾರು 25ಕ್ಕೂ ಹೆಚ್ಚು ಗ್ರಾಮಸ್ಥರು ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಗ್ರಾಮಸ್ಥರು ಮಾತನಾಡಿ, ಹಲವು ದಶಕದಿಂದ ಗ್ರಾಮದಲ್ಲಿ ವಾಸಿಸುತ್ತಿದ್ದೇವೆ. ಈವರೆಗೂ ಸಮರ್ಪಕ ರಸ್ತೆ ಇಲ್ಲದ ಕಾರಣ ಕಲ್ಲು, ಮಣ್ಣಿನ ರಸ್ತೆಯಲ್ಲೇ ಕಾಲ್ನಡಿಗೆಯಲ್ಲಿ ತೆರಳಬೇಕಿದೆ. ಇದರಿಂದ ಮಹಿಳೆಯರು, ಮಕ್ಕಳು, ವೃದ್ಧರು ತೊಂದರೆ ಅನುಭವಿಸುವಂತಾಗಿದೆ. ವಾಹನ ಸೌಕರ್ಯವಿಲ್ಲದ ಪರಿಣಾಮ ಅನಾರೋಗ್ಯಕ್ಕೆ ತುತ್ತಾದವರನ್ನು ಡೋಲಿಯ ಮೂಲಕ ಮ.ಬೆಟ್ಟಕ್ಕೆ ಕರೆದೊಯ್ಯಬೇಕಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಲ್ಲಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಈ ಬಗ್ಗೆ ಎಚ್ಚೆತ್ತು ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಮಹದೇವ ತಂಬಡಿ, ಹುಚ್ಚಯ್ಯ ತಂಬಡಿ, ಕುಮಾರ, ಪುಟ್ಟರಾಜು ಇನ್ನಿತರರು ಇದ್ದರು.