ಬೆಳಗಾವಿ: ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕಿನ್ ಡಿಸೀಸ್) ಸಾಂಕ್ರಾಮಿಕ ಕಾಯಿಲೆ ಉಲ್ಬಣವಾಗುತ್ತಿದೆ. ರೈತರು ರೋಗ ಲಕ್ಷಣ ಕಂಡುಬಂದ ತಕ್ಷಣ ಸಮೀಪದ ಪಶು ಆಸ್ಪತ್ರೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾಯಿಲೆ ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ, ನೊಣ, ಉಣ್ಣೆ ಇತ್ಯಾದಿಯಿಂದ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ರೋಗ ಪಸರಿಸುತ್ತದೆ.
ರೋಗದ ಲಕ್ಷಣಗಳು: ಅತಿಯಾದ ಜ್ವರ (105-180) ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು, ಜಾನುವಾರುಗಳ ಚರ್ಮದ ಮೇಲೆ 2-5 ಸೆ.ಮೀ. ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ಹುಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು, ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಎಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ.
ರೋಗ ತಡೆಗಟ್ಟುವಿಕೆ ಕ್ರಮ: ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ. ರೋಗ ಲಕ್ಷಣಕ್ಕೆ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು, ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರ್ಮಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರು ಬೇರ್ಪಡಿಸುವುದು, ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು, ಹಸಿರು ಮೇವು, ಪೌಷ್ಟಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 5-6 ಬಾರಿ ಕುಡಿಸಬೇಕು. ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ರೋಗಗ್ರಸ್ಥ ಜಾನುವಾರು ಮರಣ ಹೊಂದಿದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು. ರೈತರು ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಡಾ. ರಾಜೀವ ಕುಲೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.