ಜಿಲ್ಲೆ

ದಬ್ಬಾಳಿಕೆ, ದೌರ್ಜನ್ಯ ತೊಡೆಯಲು ರಾಜಕಾರಣಕ್ಕೆ!

ಕೆ.ಎಂ.ದೊಡ್ಡಿ: ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅನುಭವಿಸುತ್ತಿದ ದಬ್ಬಾಳಿಕೆ, ದೌರ್ಜನ್ಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ನಾನು ಸಕ್ರಿಯ ರಾಜಕಾರಣಕ್ಕೆ ಬಂದಿದ್ದೇನೆಯೇ ಹೊರತು ಸ್ವಾರ್ಥಕ್ಕಾಗಿ ಅಲ್ಲ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಎಂ.ಉದಯ್ ಹೇಳಿದರು.

ಭಾರತೀ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿಕ್ಕರಸಿನಕೆರೆ ಹೋಬಳಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಅನುಭವವಿಲ್ಲದ ರಾಜಕಾರಣಿಯಾದರೂ ನನ್ನ ಸಮಾಜಮುಖಿ ಸೇವೆ ಪರಿಗಣಿಸಿ ರಾಷ್ಟ್ರೀಯ ನಾಯಕರು ನನ್ನನ್ನು ಅಭ್ಯರ್ಥಿಯಾಗಿ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು ನನ್ನನ್ನು ನಿಮ್ಮಲ್ಲೊಬ್ಬನೆಂದು ಭಾವಿಸಿ ಪ್ರತಿಯೊಬ್ಬರೂ ನಾನೇ ಉದಯ್ ಎಂದು ತಿಳಿದು ಗೆಲುವಿಗಾಗಿ ದುಡಿಯಬೇಕು ಎಂದು ಮನವಿ ಮಾಡಿದರು.

15 ವರ್ಷಗಳಿಂದ ಕಾಂಗ್ರೆಸ್ ಶಾಸಕರಿಲ್ಲ ಎಂಬ ಕೊರಗನ್ನು ನೀಗಿಸಲು, ಹಿಂದಿನ ಚಿತ್ರಣ ಮತ್ತೆ ಮರುಕಳಿಸಬೇಕು. ಕಾಂಗ್ರೆಸ್ ಕಾರ್ಯಕರ್ತರನ್ನು ಮತ್ತೆ ಎದೆಯುಬ್ಬಿಸಿ ಓಡಾಡುವಂತೆ ಮಾಡಲು ಎಲ್ಲರೂ ಶ್ರಮವಹಿಸಬೇಕು. ಕಳೆದ ಬಾರಿ ನಡೆದ ಎರಡು ವಿಧಾನ ಪರಿಷತ್ ಚುನಾವಣೆಯಲ್ಲಿ ಇಬ್ಬರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ ಗೆಲ್ಲಿಸಿದ್ದೀರಿ. ಹಾಗೆಯೇ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದ್ದು ಈ ಬಾರಿ ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಜಾರಿಗೆ ತಂದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವುದರ ಮೂಲಕ ಮನವರಿಕೆ ಮಾಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಮಾತನಾಡಿ, ಕದಲೂರು ಉದಯ್ ಹತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿಕೊಂಡು ಬಂದಿದ್ದು, ಈ ಚುನಾವಣೆಯಲ್ಲಿ ಅವರ ಪರವಾಗಿ ಕೆಲಸ ಮಾಡಿ ಗೆಲುವು ಗಳಿಸುವಂತೆ ಮಾಡಿಯೇ ತೀರುತ್ತೇನೆಂದು ಹೇಳಿದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎ.ಎಸ್.ರಾಜೀವ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ ಗಂಗಾಧರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್, ಚಂದೂಪುರ ಪಾಪಣ್ಣ ಬಿ.ಇ.ಟಿ ಟ್ರಸ್ಟ್ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎಂ.ನಂಜೇಗೌಡ, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಮಹಿಳಾ ಮುಖಂಡರಾದ ಮಮತಾ ಶಂಕರೇಗೌಡ ಉಪಸ್ಥಿತರಿದ್ದರು.