ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು 
ಜಿಲ್ಲೆ

ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

ಬಾಗಲಕೋಟೆ: ಬಸ್ ಪ್ರಯಾಣ ದರ ಶೇ.೧೫ ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಎಬಿವಿಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಡಳಿತ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಶೇ.೧೫ ರಷ್ಟು ಹೆಚ್ಚಳ ಮಾಡುವುದರ ಮೂಲಕ ಬಡ, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರಿಗೆ ಜನತೆಗೆ ಹೊರೆ ಮಾಡಿದ್ದಾರೆ. ಸರ್ಕಾರಿ ಬಸಗಳನ್ನೇ ಅವಲಂಬಿಸಿ ಸಾವಿರಾರು ಜನ ದಿನ ನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಓಡಾಡುತ್ತಾರೆ. ಆದರೆ ಬಸ್ ದರ ಹೆಚ್ಚಳ ಮಾಡುವುದರ ಮೂಲಕ ಆರ್ಥಿಕ ಹೊರೆಯನ್ನು ಜನ ಸಾಮಾನ್ಯರ ಮೇಲೆ ಸರ್ಕಾರ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಕ್ತಿ ಯೋಜನೆಯಿಂದಾಗಿ ದಿನನಿತ್ಯ ಬಸ್‌ಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಸರ್ಕಾರದ ಗಮನಕ್ಕೆ ಇದೆ. ಆದರೆ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳ ಶಾಲಾ, ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಬಸ್‌ಗಳಲ್ಲಿ ಸೀಟ್‌ಗಳು ಸಿಗದೇ ಒದ್ದಾಡುತ್ತಿದ್ದಾರೆ. ಕೆಲವು ಬಸ್‌ಗಳಂತು ನಿಲ್ಲುವದಿಲ್ಲ. ಇದರಿಂದ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ. ಸರ್ಕಾರ ಕೂಡಲೇ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಿ ವಿದ್ಯಾರ್ಥಿಗಳ ಹಾಗೂ ಜನಸಾಮಾನ್ಯರ ಪ್ರಯಾಣಕ್ಕೆ ಅನುಕೂಲ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.