ಜಿಲ್ಲೆ

ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಹಾಸನ: ಪರಿಶಿಷ್ಟ ಜಾತಿ, ಪಂಗಡದ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಬುಧವಾರ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ದೇಶಕ್ಕೆ ಸ್ವಾತಂತ್ರೃ ಲಭಿಸಿ 75 ವರ್ಷಗಳಾದರೂ ದಲಿತರಿಗೆ ಸ್ವಾತಂತ್ರೃ ಈಗಲೂ ಮರೀಚಿಕೆಯಾಗಿದೆ. ದಲಿತರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿ ಜಾರಿಗೊಳಿಸಿದ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳದೆ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂಬ ಕನಸು ಈಡೇರದೆ ಹೀನಾಯ ಸ್ಥಿತಿಯಲ್ಲಿ ಬದುಕುವಂತಾಗಿದೆ. ಆದ್ದರಿಂದ ಎಸ್‌ಸಿ- ಎಸ್ಟಿ ಸಮುದಾಯದ ಜ್ವಲಂತ ಸಮಸ್ಯೆಗಳನ್ನು ಪರಿಹರಿಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಬೇಕು. ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಇತರೆ ಉದ್ದೇಶಕ್ಕೆ ಬಳಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಸರ್ಕಾರಿ ಇಲಾಖೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಹಾಗು ವಿದ್ಯಾರ್ಥಿ ವೇತನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಯ್ದೆ 2023ಯನ್ನು ಕೇಂದ್ರ ಸರ್ಕಾರಕ್ಕೆ ಸಂವಿಧಾನ ತಿದ್ದುಪಡಿಗೆ ಕಳುಹಿಸಿದೆ. ಈ ಕಾಯ್ದೆಯನ್ನು 9ನೇ ಶೆಡ್ಯೂಲ್‌ಗೆ ಸೇರಿಸಬೇಕು. ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವು ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಕೃಷ್ಣದಾಸ್, ರಮೇಶ್, ಅರೆಹಳ್ಳಿ ನಿಂಗರಾಜು, ಪ್ರದೀಪ್, ಜೈ ಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ಮಂಜು ತೇಜೂರು, ತೋಟೇಶ್ ನಿಟ್ಟೂರ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.