ಮೈಸೂರು; ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡುವುದಕ್ಕೆ ನನ್ನ ಸಹಮತ ಇದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರು ಭಾಗಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನೀಡಿರುವ ಕೊಡುಗೆ ಅಪಾರ. ಯಾರು ಕೊಡುಗೆ, ನೆರವು ನೀಡಿದ್ದಾರೋ ಅವರನ್ನು ಸ್ಮರಿಸುವುದು ನಮ್ಮ ಧರ್ಮ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಲಹೆ ಸಮಂಜಸವಾಗಿದ್ದು, ಅದಕ್ಕೆ ನನ್ನ ಸಹಮತವೂ ಇದೆ. ಅಲ್ಲದೆ, ಇದನ್ನು ಯಾರೂ ವಿರೋಧಿಸಲ್ಲ ಎಂದರು.
ಮೀಸಲಾತಿ ಹೆಚ್ಚಳ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಮೀಸಲಾತಿ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪಂಚಮಸಾಲಿ ಹಾಗೂ ಒಕ್ಕಲಿಗರು ಮೀಸಲಾತಿ ಹೆಚ್ಚಳ ಬೇಡಿಕೆ ಇಟ್ಟಿದ್ದಾರೆ. ಆದರೆ, ಒಬಿಸಿಗೆ ತೊಂದರೆಯಾಗದಂತೆ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ಮೀಸಲಾತಿ ಎಂಬುದು ಹಿಂದುಳಿದ ವರ್ಗಕ್ಕೆ ನೀಡಲಾಗುತ್ತಿದ್ದು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸಿನ ಪ್ರಕಾರ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.