ಜಿಲ್ಲೆ

ದುಶ್ಚಟಗಳಿಂದ ದೂರವಿದ್ದು ಮುನ್ನಡೆ ಸಾಧಿಸಿ

ಬೇಲೂರು : ಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು, ಆರ್ಥಿಕ ಮುನ್ನಡೆ ಸಾಧಿಸುವಂತಾದಾಗ ಮಾತ್ರ ಶ್ರಮಕ್ಕೆ ಅರ್ಥ ಸಿಗುತ್ತದೆ ಎಂದು ಬೇಲೂರಿನ ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಪ್ರಸನ್ನಕುಮಾರ್ ಹೇಳಿದರು.
ಪಟ್ಟಣದ ಹಳೇ ತಾಲೂಕು ಕಚೇರಿಯಲ್ಲಿ ಕಾನೂನು ಸೇವಾ ಸಮಿತಿ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ತಂಬಾಕು ನಿಷೇಧ ದಿನ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ನಮ್ಮಲ್ಲಿ ಕಾರ್ಮಿಕರು ಹೆಚ್ಚಾಗಿ ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಕಾರ್ಮಿಕ ಕೂಡ ದುಶ್ಚಟಗಳಿಂದ ದೂರವಿದ್ದು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಉಜ್ವಲ ಭವಿಷ್ಯ ರೂಪಿಸಬೇಕು. ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಸಹ ನಿಜವಾದ ಕಾರ್ಮಿಕರನ್ನು ಹುಡುಕಿ ಅವರಿಗೆ ಸವಲತ್ತು ತಲುಪಿಸುವ ಕೆಲಸ ಮಾಡಬೇಕಿದೆ ಎಂದರು. ಕಾರ್ಮಿಕ ಫಲಾನುಭವಿಗಳಿಗೆ ಗುರುತಿನ ಚೀಟಿ ಹಾಗೂ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಕಾರ್ಮಿಕರ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಕಾರ್ಮಿಕ ನಿರೀಕ್ಷಕ ವಿಜಯ್ ಕುಮಾರ್, ವಕೀಲರ ಸಂಘದ ಉಪಾಧ್ಯಕ್ಷ ಬಿ.ಎ.ರವಿ, ಕಾರ್ಯದರ್ಶಿ ಜಿ.ಟಿ.ಪ್ರಕಾಶ್ ಇತರರಿದ್ದರು.