ಜಿಲ್ಲೆ

ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ: ಅಬ್ದುಲ್ ಸಮದ್ ಆಗ್ರಹ

ಹಾಸನ: ಅಲ್ಪ ಸಂಖ್ಯಾತರ ಮುಖಂಡ ಐವಾನ್ ಡಿಸೋಜ ಅವರ ಮಾತುಗಳ ತಿರುಚಿ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಅಬ್ದುಲ್ ಸಮದ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ನಡೆಸುತ್ತಿರುವ ಕುತಂತ್ರ ರಾಜಕಾರಣವನ್ನು ವಿರೋಧಿಸಿ ಆ.19ರ ಸೋಮವಾರದಂದು ಮಾಡಿದ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಮಾಡಿದ ಭಾಷಣವನ್ನು ತಪ್ಪಾಗಿ ಅರ್ಥೈಸಿಕೊಂಡು ಅವರ ಮಾತುಗಳನ್ನು ತಿರುಚಿ ಅವರ ಮನೆಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಐವಾನ್ ಡಿಸೋಜ ಮತ್ತು ಅವರ ಕುಟುಂಬದವರಿಗೆ ಮಾನಸಿಕವಾಗಿ ಹಿಂಸೆ, ಕಿರುಕುಳ ನೀಡಲಾಗುತ್ತಿದೆ. ವ್ಯಕ್ತಿಯ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೆಯೇ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಮಂಗಳೂರು ಬಿಜೆಪಿ ನಾಯಕರ ಮನುಷ್ಯತ್ವ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ದುಷ್ಕರ್ಮಿಗಳ ಬಗ್ಗೆ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಕಯ್ಯೂಂ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ವಿ. ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು ದಾಸರಕೊಪ್ಪಲು, ಯುವ ಮುಖಂಡ ಆಲ್ವಿನ್, ಕೆಪಿಸಿಸಿ ಸದಸ್ಯ ಕೆ.ಎ. ಸಲೀಂ ಕೊಲ್ಲಹಳ್ಳಿ ಇತರರು ಉಪಸ್ಥಿತರಿದ್ದರು.