ಜಿಲ್ಲೆ

ದೇವರಾಜ ಅರಸರ ಜನಪರ ಕೆಲಸ ಇಂದಿಗೂ ಜೀವಂತ: ಬಿ.ಆರ್. ಪೂರ್ಣಿಮಾ

ಹಾಸನ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಈ ನಾಡಿನ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ. ಅವರ ದೂರದೃಷ್ಟಿಯಿಂದ ಮಾಡಿರುವ ಜನಪರ ಕೆಲಸಗಳು ಇಂದಿಗೂ ಮಾಸದಂತೆ ಉಳಿದಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಬಿ.ಆರ್. ಪೂರ್ಣಿಮಾ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಹುದ್ದೆಗಳಲ್ಲಿ ಶೇ.50ರಷ್ಟು ಮೀಸಲಾತಿ, ಜನತಾ ನಿವೇಶನ, ಉಳುವವನೇ ಭೂಮಿಯ ಒಡೆಯ, ಗರೀಬಿ ಹಠಾವೋ, 20 ಅಂಶಗಳ ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದು ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ ಎಂದರು.
ಸರಳ, ಸಜ್ಜನಿಕೆ ಜೀವನ ನಡೆಸುತ್ತಿದ್ದ ದೇವರಾಜ ಅರಸ್ ಅವರು, ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಯಾಗಿ ಈ ರಾಜ್ಯಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಕಾರ್ಮಿಕ, ಪ್ರವಾಸೋದ್ಯಮ, ಸಾರಿಗೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಮೀನುಗಾರಿಕೆ, ರೇಷ್ಮೆ ಹೀಗೆ ವಿವಿಧ ಇಲಾಖೆಗಳಿಗೆ ಅಪಾರವಾದ ಕೊಡುಗೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇವರಾಜ ಅರಸ್ ಅವರ ಜೀವನ ಚರಿತ್ರೆ ಕುರಿತ ಚಿತ್ರಗಳನ್ನು ಕಾರ್ಯಕ್ರಮಗಳಲ್ಲಿ ಪ್ರದರ್ಶಿಸುವುದರ ಜತೆಗೆ ಅವರ ಬಗ್ಗೆ ಕಿರು ಪುಸ್ತಕವನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಇನ್ನಷ್ಟು ಪರಿಣಾಮಕಾರಿಯಾಗಿ ಅರಸು ಜಯಂತ್ಯುತ್ಸವ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಹಿಂದುಳಿದ ವರ್ಗಗಳ ಕಲ್ಯಾಣ ಡಿಸಿ ಉಳ್ಳಾಗಡ್ಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ. ಕೃಷ್ಣೇಗೌಡ, ಸಮುದಾಯದ ಮುಖಂಡ ಸಣ್ಣೆಗೌಡ, ನಿವೃತ್ತ ಮುಖ್ಯ ಶಿಕ್ಷಕ ಜಿ. ಗೋವಿಂದರಾಜು, ಪುಟ್ಟಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.