ಬಳ್ಳಾರಿ : ಭವಿಷ್ಯದ ದೇಶ ಕಟ್ಟಲು ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ಮುನ್ನಡೆಸಬೇಕೆಂದರೆ ಶಿಕ್ಷಕರ ಪಾತ್ರ ಅಮೂಲ್ಯವಾಗಿದೆ ಎಂದು ಶಾಸಕ ನಾರಾ ಭರತರೆಡ್ಡಿ ಹೇಳಿದರು.
ನಗರದ ಮಹರ್ಷಿ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಾಣ ಇಲಾಖೆ ಸಹಯೋಗದೊಂದಿಗೆ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಂದು ದೇಶದ ಭವಿಷ್ಯ ಅರಳುವುದು ನಾಲ್ಕು ಗೋಡೆಗಳ ಮಧ್ಯದ ಮಕ್ಕಳ ಶಿಕ್ಷಣದಲ್ಲಿ. ಶಿಕ್ಷಕರು ದೈವ ಸ್ವರೂಪಿಗಳು. ದೇಶದ ಅಭಿವೃದ್ಧಿಯ ಪಥ ಶಿಕ್ಷಕರ ಕೈಯಲ್ಲಿದೆ, ಅವರ ಮಾರ್ಗದರ್ಶನದ ಪ್ರೇರಣೆಯಿಂದ ಮಾತ್ರ ಮನುಷ್ಯನು ಉನ್ನತ ಸ್ಥಾನಕ್ಕೆ ಬೆಳೆಯಲು ಸಾಧ್ಯ ಎಂದರು. ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾದ ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಡಿಸಿ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮಾತನಾಡಿ, ಶಿಕ್ಷಕರು ಮಕ್ಕಳನ್ನು ಕೂಡ ತಮ್ಮ ಮಕ್ಕಳಂತೆ ಭಾವಿಸಿ ಶಿಕ್ಷಣ ನೀಡುವುದು ಶ್ಲಾಘನೀಯ ಕಾರ್ಯವಾಗಿದೆ. ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯಲು ಶಿಕ್ಷಕರ ಶ್ರಮ ಪ್ರಮುಖವಾದುದು ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ, ಕೆಪಿಎಸ್‌ನ ಸಮಾಜಶಾಸ್ತ್ರ ಉಪನ್ಯಾಸಕ ಡಾ.ಯು. ಶ್ರೀನಿವಾಸಮೂರ್ತಿ ಮಾತನಾಡಿದರು. ಬಳಿಕ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 13 ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.