ಜಿಲ್ಲೆ

ದೇಶದ ಪ್ರಗತಿಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಅಗತ್ಯ: ಡಾ.ಟಿ.ಜಿ.ಸೀತಾರಾಮ್

ಹಾಸನ: 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕಿದ್ದರೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಬೇಕಿದೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಡಾ.ಟಿ.ಜಿ.ಸೀತಾರಾಮ್ ಅಭಿಪ್ರಾಯಪಟ್ಟರು.
ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ 14ನೇ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಪ್ರಮಾಣ ಶೇ.80 ಕ್ಕಿಂತ ಹೆಚ್ಚಿದ್ದರೆ, ಭಾರತದಲ್ಲಿ ಶೇ.28.3 ರಷ್ಟು ಇದೆ. ಕಳೆದ 24 ವರ್ಷಗಳ ಅವಧಿಯಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾಗುವ ವಿದ್ಯಾರ್ಥಿಗಳ ಪ್ರಮಾಣ ಶೇ.11 ರಿಂದ ಶೇ.28.3ಕ್ಕೆ ಏರಿಕೆಯಾಗಿದೆ. 2035ರ ವೇಳೆಗೆ ಈ ಪ್ರಮಾಣವನ್ನು ಶೇ.50 ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಸದ್ಯ ಭಾರತದಲ್ಲಿ 4.3 ಕೋಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಎಂಜಿನಿಯರಿಂಗ್ ಶಿಕ್ಷಣವೆಂದರೆ ಕಲಿಯುವುದು ಮತ್ತು ಕಲಿತದ್ದನ್ನು ಪರೀಕ್ಷೆಯಲ್ಲಿ ಬರೆಯುವುದಷ್ಟೇ ಅಲ್ಲ. ಪದವಿ ವೇಳೆ ಪಡೆದ ಜ್ಞಾನವನ್ನು ನೈಜ ಸಮಸ್ಯೆಗಳ ಪರಿಹಾರಕ್ಕೆ ಅನ್ವಯಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣವಾಗುವುದು ಎಂಜಿನಿಯರಿಂಗ್ ಪದವೀಧರರಿಗೆ ಆದ್ಯತೆಯಾಗಬೇಕು. ವೃತ್ತಿಬದುಕಿಗೆ ಕಾಲಿಡುತ್ತಿರುವ ಪದವೀಧರರು ಕಲಿಕೆಗೆ ಕೊನೆ ಎಂಬುದೇ ಇಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಭಾರತದಲ್ಲಿ ತಾಂತ್ರಿಕ ಶಿಕ್ಷಣದ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಉದ್ಯಮ ವಲಯ ಮತ್ತು ಶೈಕ್ಷಣಿಕ ವಲಯದ ನಡುವೆ ಸಮನ್ವಯತೆ ಸಾಧಿಸಲಾಗುತ್ತಿದೆ. ಸಂಶೋಧನೆ ಮತ್ತು ಉದ್ಯಮಶೀಲತೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಯು.ಪ್ರಜ್ವಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಟಿ.ಎಸ್.ಚಂದನ ಅವರಿಗೆ 2020-2024ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ, ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್‌ಟ್ರುಮೆಂಟೇಷನ್ ವಿಭಾಗದ ಬಿ.ಸಿ.ಅಂಚಿತ್ ಗೌಡ ಅವರಿಗೆ 2024ನೇ ಸಾಲಿನ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ನೀಡಲಾಯಿತು. ಪ್ರತಿ ವಿಭಾಗದಲ್ಲೂ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎ.ಜೆ.ಕೃಷ್ಣಯ್ಯ, ನಿರ್ದೇಶಕ ಡಾ.ಎಸ್.ಪ್ರದೀಪ್, ಡೀನ್‌ಗಳಾದ ಡಾ.ಎಚ್.ಜೆ.ಅಮರೇಂದ್ರ, ಡಾ.ಎಚ್.ಎಸ್.ನರಸಿಂಹನ್, ವಿವಿಧ ವಿಭಾಗಗಳ ಮುಖ್ಯಸ್ಥರು, ಕಾಲೇಜು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.