ಕುಶಾಲನಗರ: ದೇಶದ ಘನತೆ ಹೆಚ್ಚಿಸಲು ಮತ್ತು ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಬೇಕೆಂದು ಕೇಂದ್ರ ಸಚಿವ ಜನರಲ್ (ನಿವೃತ್ತ) ವಿ.ಕೆ.ಸಿಂಗ್ ಮನವಿ ಮಾಡಿದರು.
ಶಿರಂಗಾಲದಿಂದ ಕುಶಾಲನಗರದವರೆಗೆ ಬಿಜೆಪಿಯಿಂದ ಆಯೋಜಿಸಿದ್ದ ಬೈಕ್ ಜಾಥಾ ಸಮಾಪ್ತಿಯಾದ ನಂತರ ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ದೇಶದ ಹೆಸರನ್ನು ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬೇಡಿ. ಹಿಂದು ಸಂಘಟನೆಗಳನ್ನು ನಿಷೇಧ ಮಾಡುವ ಹುನ್ನಾರದ ವಿರುದ್ಧ ಸಿಡಿದೆಳಲು ತಿಳಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕ ಸಾಕಷ್ಟು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಬಾರಿಯೂ ಬಿಜೆಪಿ ಸರ್ಕಾರ ರಚಿಸುತ್ತೇವೆ. ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರನ್ನು ಭಾರಿ ಅಂತರದಲ್ಲಿ ಗೆಲ್ಲಿಸಿ ಕಳುಹಿಸಿಕೊಟ್ಟರೆ ಅವರು ಮಂತ್ರಿಯಾಗುವುದು ನಿಶ್ಚಿತ ಎಂದರು.
ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಮಾತನಾಡಿ, ಈ ಕ್ಷೇತ್ರದ ಅಭಿವೃದ್ಧಿಗಾಗಿ 1800 ಕೋಟಿ ರೂ. ಅನುದಾನ ತಂದಿದ್ದೇನೆ. ಅರಕಲಗೂಡು ಭಾಗದ ಜನರು ಇಲ್ಲಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಬಿ.ಎಸ್.ಅನಂತಕುಮಾರ್, ಕೆ.ಜಿ.ಮನು, ಮನುಕುಮಾರ್ ರೈ, ಕುಶಾಲನಗರ ಪುರಸಭೆ ಅಧ್ಯಕ್ಷ ಜಯವರ್ಧನ ಇತರರು ಹಾಜರಿದ್ದರು.