ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರದಲ್ಲೇ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಎಲ್ಲ ಪ್ರಕ್ರಿಯೆಗಳು ನಡೆದಿದ್ದು, ಆರ್ಥಿಕ ಇಲಾಖೆಯಿಂದ ಮಂಜೂರಾತಿಯೂ ದೊರೆತಿದೆ. ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ 5.56 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಅಧಿಕಾರಿಗಳ ಶ್ರಮ, ಕಾಯಕನಿಷ್ಠೆ ಹಾಗೂ ಪ್ರಾಮಾಣಿಕ ಪ್ರಯತ್ನದಿಂದಾಗಿ ದೊಡ್ಡಬಳ್ಳಾಪುರದ ತಾಲೂಕು ಆಸ್ಪತ್ರೆಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ. ಇದಕ್ಕೆ ಕಾರಣರಾದ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುವೆ ಎಂದ ಅವರು, ಈ ಆಸ್ಪತ್ರೆ ಜಿಲ್ಲೆಗೆ ಮಾದರಿಯಾಗುವಂತೆ ಕಾರ್ಯನಿರ್ವಹಿಸಬೇಕು. ಇಲ್ಲಿಯೇ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಎಲ್ಲ ಹಂತದ ಪ್ರಕ್ರಿಯೆ ನಡೆದಿದ್ದು, ಶೀಘ್ರದಲ್ಲಿ ಚಾಲನೆ ದೊರೆಯಲಿದೆ ಎಂದರು.
ಬಸವಣ್ಣನವರ ‘ಕಾಯಕವೇ ಕೈಲಾಸ’ ಪರಿಪಾಲಿಸಬೇಕು. ತಾಯಿ-ಮಗು ಸರ್ಕಾರಿ ಆಸ್ಪತ್ರೆ ಉತ್ತಮ ಸೇವೆ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಸೇವೆ ಮುಂದುವರಿಯಬೇಕಿದ್ದು, ಅದರ ಹೊಣೆ ವೈದ್ಯರ ಹಾಗೂ ಸಿಬ್ಬಂದಿ ಮೇಲಿದೆ ಎಂದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ತಾಯಿ-ಮಗು ಆಸ್ಪತ್ರೆ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದು, ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ವತಿಯಿಂದ ತಾಲೂಕುಮಟ್ಟದ ಅತ್ಯುತ್ತಮ ಆಸ್ಪತ್ರೆ ಎಂಬ ಗರಿಮೆಗೆ ಪಾತ್ರವಾಗಿದೆ. ನಮ್ಮ ಸುತ್ತ ಮುತ್ತಲಿನಲ್ಲಿರುವ ಮೂರು ಜಿಲ್ಲೆಗಳಿಗಿಂತ ಅತಿ ಹೆಚ್ಚು ಮಕ್ಕಳು ಜನನವಾಗುತ್ತಿರುವ ಆಸ್ಪತ್ರೆ ಇದಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪಾತ್ರವಾಗಿದೆ ಎಂದರು.
ನಗರದ ಸಿದ್ದೇನಾಯಕನಹಳ್ಳಿಯಲ್ಲಿ 195 ಕೋಟಿ ರೂ. ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಇದಲ್ಲದೆ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅಭಿಮ್ ಯೋಜನೆಯಡಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್ ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಆಗಲಿದೆ. ಮುಂಬರುವ ದಿನಗಳಲ್ಲಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.
ವಿವಿಧ ಕಾಮಗಾರಿಗಳ ವಿವರ: ನಗರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ರೂ., ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕನಸವಾಡಿಗೆ ಮೂಲಸೌಕರ್ಯ ಉನ್ನತೀಕರಣಕ್ಕಾಗಿ ಒಟ್ಟು 60.28 ಲಕ್ಷ ರೂ., ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಸೌಕರ್ಯಕ್ಕೆ 61.10 ಲಕ್ಷ ರೂ. ಮತ್ತು ತಾಯಿ-ಮಕ್ಕಳ ಆಸ್ಪತ್ರೆ ಸೌಲಭ್ಯಗಳಿಗೆಂದು 2.24 ಕೋಟಿ ರೂ.ವೆಚ್ಚ ಸೇರಿ ಮಂಜೂರಾಗಿರುವ ಒಟ್ಟು ಮೊತ್ತ ರೂ 5.56 ಕೋಟಿ ರೂ.ಗಳಾಗಿವೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪನೆ: ದೊಡ್ಡಬಳ್ಳಾಪುರ ನಗರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ. ಹೀಗಾಗಿ ಕೇಂದ್ರ ಸರ್ಕಾರದ ವತಿಯಿಂದ ಕ್ರಿಟಿಕಲ್‌ಕೇರ್ ಯುನಿಟ್ ಸಹ ಸ್ಥಾಪನೆಯಾಗಲಿದ್ದು, ಜನರಿಗೆ ತುಂಬಾ ಪ್ರಯೋಜನವಾಗಲಿದೆ. ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸಾರ್ವಜನಿಕರಿಗೆ ಲಕ್ಷಾಂತರ ರೂ. ಖರ್ಚು ತಪ್ಪಲಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.