ಹಾಸನ: ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಹಿಂದಿಯನ್ನು ಕಡ್ಡಾಯವಾಗಿಸುವ ತ್ರಿಭಾಷಾ ನೀತಿ ವಿರೋಧಿಸಿ ಹಾಗೂ ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಎನ್.ಆರ್.ವೃತ್ತದಿಂದ ಮೆರವಣಿಗೆ ಹೊರಟು, ಡಿಸಿ ಕಚೇರಿ ಎದುರು ಧರಣಿ ನಡೆಸಿ, ದ್ವಿಭಾಷಾ ನೀತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಹಾಸನ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಶಿಕ್ಷಣದಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ ಕಡ್ಡಾಯವಾಗಿರಿಸಿರುವ ರಾಜ್ಯ ಪಠ್ಯಕ್ರಮವನ್ನು ತೀವ್ರವಾಗಿ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಿ.ಡಿ. ಮನುಕುಮಾರ್ ಮಾತನಾಡಿ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸಿ ದ್ವಿ ಭಾಷಾ ನೀತಿ ಜಾರಿಗೆ ತರಬೇಕು. ತೃತೀಯ ಭಾಷೆಯಾಗಿ ಹಿಂದಿಯನ್ನು ಪಠ್ಯಕ್ರಮದಿಂದ ತೆಗೆದು ಹಾಕಬೇಕು. ರಾಜ್ಯ ಹಾಗೂ ಕೇಂದ್ರ ಶಿಕ್ಷಣ ಮಂಡಳಿಗಳಾದ ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಲ್ಲಿ ಏಕರೂಪದ ದ್ವಿ ಭಾಷಾ ನೀತಿ ಜಾರಿಗೆ ತರಬೇಕು. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳಿಗೆ ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಒದಗಿಸಬೇಕು ಎಂದು ಆಗ್ರಹಿಸಿದರು.
2024 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದು, ಈ ಶೈಕ್ಷಣಿಕ ಒತ್ತಡದಿಂದ ಶೆ.21 ರಷ್ಟು ವಿದ್ಯಾರ್ಥಿಗಳ ಭವಿಷ್ಯ ತೊಂದರೆಯಲ್ಲಿ ಸಿಲುಕಿದೆ. ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತಮಿಳು-ಇಂಗ್ಲಿಷ್, ಮರಾಠಿ-ಇಂಗ್ಲಿಷ್ ಜೋಡಿಗಳೊಂದಿಗೆ ದ್ವಿ ಭಾಷಾ ನೀತಿ ಯಶಸ್ವಿಯಾಗಿ ಜಾರಿಗೆ ಬಂದು ಹಲವು ದಶಕ ಕಳೆದಿವೆ. ಇಂತಹ ನೀತಿಯ ಅನುಸರಣೆ ಕನ್ನಡಿಗರ ಶೈಕ್ಷಣಿಕ ಭವಿಷ್ಯಕ್ಕಾಗಿ ಕರುನಾಡಿನಲ್ಲೂ ಆಗ ಬೇಕಾಗಿದೆ ಎಂದು ಆಗ್ರಹಿಸಿದರು.
ತ್ರಿಭಾಷಾ ಸೂತ್ರದ ಕುರಿತು ರಾಷ್ಟ್ರಕವಿ ಕುವೆಂಪು ಅವರು ಹಿಂದೆಯೇ ತೀಕ್ಷ್ಣವಾದ ವಿರೋಧವನ್ನು ಸಾರಿದ್ದರು. ಕರ್ನಾಟಕದ ಸಾಂಸ್ಕೃತಿಕ ಮತ್ತು ಭಾಷಿಕ ಅಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡವು ಕೇಂದ್ರ ಸ್ಥಾನವನ್ನು ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯು ಜಾಗತಿಕ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ, ಹಿಂದಿಯನ್ನು ಕಡ್ಡಾಯವಾಗಿ ಓದಿಸುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ. ಇದರಿಂದ ಒಬ್ಬನೇ ಒಬ್ಬ ಕನ್ನಡಿನಿಗೂ ಉದ್ಯೋಗ ದೊರೆತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸೀತಾರಾಂ, ಹೇಮಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ತನುಗೌಡ, ಕಾರ್ಯದರ್ಶಿ ರಘು ಪಾಳ್ಯ, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿಗೌಡ, ಸಕಲೇಶಪುರ ತಾಲೂಕು ಅಧ್ಯಕ್ಷ ಗಗನ್‌ಗೌಡ, ಬೇಲೂರು ಅಧ್ಯಕ್ಷ ಬಿ. ಚಂದ್ರಶೇಖರ್, ಚನ್ನರಾಯಪಟ್ಟಣ ಅಧ್ಯಕ್ಷ ಮಧು ಕರಡೇವು, ಅರಸೀಕೆರೆ ಅಧ್ಯಕ್ಷ ಕಿರಣ್ ಕುಮಾರ್, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಓಯಿಲೇಶ್, ಅರಕಲಗೂಡು ಅಧ್ಯಕ್ಷ ಸೋಮಶೇಖರ್, ಆಲೂರು ಅಧ್ಯಕ್ಷ ನಟರಾಜ್, ಸಾಮಾಜಿಕ ಜಾಲತಾಣದ ಸಂಚಾಲಕ ಎಸ್.ಎ.ಅಬ್ದುಲ್ ಖಾದರ್, ಮೋಹನ್ ಗೌಡ, ಚಂದ್ರೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಬಿ.ಆರ್.ಬೊಮ್ಮೇಗೌಡ ಮೊದಲಾದವರು ಭಾಗಿಯಾಗಿದ್ದರು.