ಶ್ರೀರಂಗಪಟ್ಟಣ: ಮೈಸೂರು ನಗರ, ಶ್ರೀರಂಗಪಟ್ಟಣ ಸೇರಿದಂತೆ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಇಬ್ಬರು ದುಷ್ಕರ್ಮಿಗಳನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರಿನ ಗೌಸಿಯಾ ನಗರದ ಮಹಮ್ಮದ್ ಇಬ್ರಾಹಿಂ ಅವರ ಪುತ್ರ ಮೊಹಮ್ಮದ್ ರೋಷನ್ (19) ಹಾಗೂ ಶಾಂತಿನಗರದ ಸೈಯದ್ ಅಬ್ಜಲ್ ಅವರ ಮಗ ಸೈಯದ್ ಸಾಕೀಬ್ (19) ಬಂಧಿತರು.
ಮೈಸೂರಿನ ಗೌಸಿಯಾನಗರದಲ್ಲಿ ಕಾರ್ ಟಿಂಕರಿಂಗ್ ಕೆಲಸ ಮಾಡಿಕೊಂಡಿದ್ದ ಈ ಯುವಕರು ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಬಳಿ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ವ್ಹೀಲಿಂಗ್ ಮಾಡಿಕೊಂಡು ತೆರಳುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಈ ಯುವಕರನ್ನು ವಿಚಾರಿಸಿದಾಗ ಅನುಮಾನಾಸ್ಪದವಾಗಿ ನಡೆದುಕೊಂಡರು. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನಗಳ ಕಳವು ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರು ಮೈಸೂರಿನ ಗೋಕುಲಂ, ಸಾತಗಳ್ಳಿ, ಶ್ರೀರಂಗಪಟ್ಟಣದ ಅಂಚೆಕೇರಿ ಬೀದಿಯಲ್ಲಿ ಕಳವು ಮಾಡಿದ್ದ ಒಟ್ಟು 2.60 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಯುವಕರು ಶೋಕಿಗಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮೈಸೂರಿನ ಹಲವೆಡೆ ಕಳ್ಳತನ ನಡೆಸಿರುವ ಸಂಬಂಧ ಮೈಸೂರಿನ ಎನ್.ಆರ್.ಠಾಣೆ, ನಜರ್‌ಬಾದ್ ಹಾಗೂ ವಿ.ವಿ.ಪುರಂ ಠಾಣೆಗಳಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದ್ದವು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಅವರ ನಿರ್ದೇಶನದಂತೆ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಹಾಗೂ ಡಿವೈಎಸ್ಪಿ ಮುರಳಿ ಅವರ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಡಿವೈಎಸ್ಪಿ ಸಂತೋಷ್ ಚೌಹಾಣ್, ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರ್, ಪಿಎಸ್‌ಐ ರವಿಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.