ಪಾಂಡವಪುರ: ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಕಿಡಿಗೇಡಿಗಳು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದು, ಹಿಂದುಗಳ ಭಾವನೆಗೆ ಧಕ್ಕೆ ತರಲಾಗುತ್ತಿದೆ. ಇದು ಹೀಗೆ ಮುಂದುವರರಿದರೆ ಹೋರಾಟದ ಮೂಲಕ ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ನವೀನ್ ಎಚ್ಚರಿಸಿದರು.
ಧರ್ಮಸ್ಥಳದ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ಈಗಾಗಲೇ ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ. ಈ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕೆಲ ಕಿಡಿಗೇಡಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕ್ಷೇತ್ರದ ಪಾವಿತ್ರ್ಯತೆಯನ್ನು ಹಾಳು ಮಾಡುವ ಹುನ್ನಾರದಲ್ಲಿ ತೊಡಗಿಕೊಂಡಿದ್ದಾರೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ಹಿಂದೆ ಬೇರೆ ಯಾರದ್ದೋ ಕುಮ್ಮಕ್ಕು ಇದೆ ಎಂಬ ಅನುಮಾನ ಕಾಡುತ್ತಿದೆ. ಎಸ್‌ಐಟಿ ತನಿಖಾ ತಂಡ ತನಿಖೆ ಬಗ್ಗೆ ಯಾವುದೇ ವಿವರ ನೀಡದಿದ್ದರೂ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.
ಇದು ಧರ್ಮಸ್ಥಳ ಕ್ಷೇತ್ರದ ಅಪಾರ ಭಕ್ತರ ಭಾವನೆಗಳನ್ನು ಘಾಸಿಗೊಳಿಸುತ್ತಿದೆ. ಈ ರೀತಿ ಆಧಾರ ರಹಿತ ಆರೋಪ ಮಾಡುವುದನ್ನು ನಿಲ್ಲಿಸದಿದ್ದರೆ ಹಿಂದುಗಳು ಒಗ್ಗೂಡಿ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕರಿದರು.
ಬಿಜೆಪಿ ಕ್ಷೇತ್ರ ಅಧ್ಯಕ್ಷ ನೀಲನಹಳ್ಳಿ ಧನಂಜಯ ಮಾತನಾಡಿ, ಧರ್ಮಸ್ಥಳದ ಹೆಸರಿನಲ್ಲೇ ಧರ್ಮ ಇದೆ. ಈ ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಕೇಳಿ ಬಂದಿರುವ ಆರೋಪಗಳು ನಿಜವಾಗಿದ್ದರೆ ದೇಶದ ಕಾನೂನು ಅಂತಹವರಿಗೆ ಶಿಕ್ಷೆ ನೀಡುತ್ತದೆ. ಕ್ಷೇತ್ರದ ಬಗ್ಗೆ ಕಪೋಲಕಲ್ಪಿತ ಕತೆ ಕಟ್ಟಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯಾದಾದ್ಯಂತ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಕಾರ್ಯದರ್ಶಿ ಪುರುಷೋತ್ತಮ್, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಂಜುಳಾ ಶಂಕರ್‌ನಾಗ್ ಮುಖಂಡರಾದ ಚಿಕ್ಕಮರಳಿ ನವೀನ್‌ಕುಮಾರ್, ನಿರ್ಮಲ ರಮೇಶ್ ಅನುಸೂಯ ಇತರರು ಇದ್ದರು.