ಜಿಲ್ಲೆ

ಧಾರ್ಮಿಕ ಕಾರ್ಯಗಳಿಂದ ಮನುಷ್ಯನ ಆರೋಗ್ಯ ವೃದ್ಧಿ

ಬಾಗೂರು: ಲೋಕಕಲ್ಯಾಣಾರ್ಥವಾಗಿ ಧಾರ್ಮಿಕ ಕಾರ್ಯಗಳು ಹೆಚ್ಚು ನಡೆಯುವುದರಿಂದ ಮನುಷ್ಯನ ಆರೋಗ್ಯ ಮತ್ತು ಭಾಗ್ಯ ವೃದ್ಧಿಸುತ್ತದೆ ಎಂದು ಕೆರೆಗೋಡಿ ರಂಗಾಪುರ ಮಠದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.


ಮುಜರಾಯಿ ದೇವಾಲಯಗಳ ಅರ್ಚಕರು, ಆಗಮಿಕರ ಸಂಘ ಹಾಗೂ ಶ್ರೀ ಮಾರುತಿ ಸೇವಾ ಟ್ರಸ್ಟ್ ವತಿಯಿಂದ ಹೋಬಳಿಯ ಬೀಚಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಸತ್ಯನಾರಾಯಣಸ್ವಾಮಿ ಪೂಜಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.


ಮನುಷ್ಯನಿಗೆ ಶಾಂತಿ ಮತ್ತು ನೆಮ್ಮದಿ ದೊರೆಯಬೇಕಾದರೆ ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು. ಪಟ್ಟಣ ಬೆಳೆದಂತೆಲ್ಲ ಮನುಷ್ಯನ ನೆಮ್ಮದಿ ಕಡಿಮೆಯಾಗುತ್ತಿದೆ. ಇಂತಹ ಸಂದ

ರ್ಭದಲ್ಲಿ ನೈಜತನದ ಬದುಕು ರೂಪಿಸಿಕೊಳ್ಳುವುದರ ಜತೆಗೆ ಗಿಡಗಳನ್ನು ನೆಡುವುದು ಅತ್ಯವಶ್ಯಕ ಎಂದರು.
ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಕೆರೆಗೋಡಿ ರಂಗಾಪುರ ಮಠ ವಿಶೇಷ ಕ್ಷೇತ್ರವಾಗಿದೆ. ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಾವಿರಾರು ಮಕ್ಕಳಿಗೆ ಶಿಕ್ಷಣ, ವಸತಿ, ಊಟ, ವಸ್ತ್ರ ನೀಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.


ಸಮಾರಂಭದಲ್ಲಿ ಶಾಸಕ ಎಚ್.ಡಿ.ರೇವಣ್ಣ, ಡಾ.ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಹೇಶ್ವರ ಸ್ವಾಮೀಜಿ, ಮುಜರಾಯಿ ಅರ್ಚಕರ ಸಂಘದ ತಾಲೂಕು ಅಧ್ಯಕ್ಷ ಶ್ರೀಧರ್ ಸ್ವಾಮೀಜಿ, ಹಿರಿಯ ಆಗಮ ಪಂಡಿತ ವಿಜಯಕುಮಾರ್, ಮುಜುರಾಯಿ ದೇವಾಲಯಗಳ ಅರ್ಚಕರ ಸಂಘದ ರಾಜ್ಯಾಧ್ಯಕ್ಷ ಶ್ರೀವತ್ಸ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯ ಧರ್ಮೇಗೌಡ, ಮಾರುತಿ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಚ್.ರಾಮಚಂದ್ರ ಇತರರು ಹಾಜರಿದ್ದರು.