ಜಿಲ್ಲೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರದಿರಿ

ಹೂವಿನಹಡಗಲಿ: ಗಣೇಶ ಚತುರ್ಥಿ ಹಾಗೂ ಈದ್‌ಮಿಲಾದ್ ಹಬ್ಬವನ್ನು ಶಾಂತಿ-ಸೌಹಾರ್ದದೊಂದಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಆಚರಿಸಬೇಕೆಂದು ಸಿಪಿಐ ದೀಪಕ್ ಆರ್.ಬೂಸರೆಡ್ಡಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಂಘಟನೆಯವರು ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪುರಸಭೆ ಹಾಗೂ ತಾಪಂ ಅಧಿಕಾರಿಗಳು ಗಣೇಶ ವಿಸರ್ಜನಾ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪುರಸಭೆ, ಗ್ರಾಪಂ, ಜೆಸ್ಕಾಂ ಮತ್ತು ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ ಎಂದರು.

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಸಂದರ್ಭದಲ್ಲಿ ಪರವಾನಗಿ ಪಡೆದು ಬ್ಯಾನರ್ ಅಳವಡಿಸಬಹುದು. ಕಾನೂನುಬಾಹಿರ ಚಟುವಟಿಕೆಗಳು ನಡೆಯುವುದು ಕಂಡುಬಂದಲ್ಲಿ ಸಂಬಂಧಪಟ್ಟ ಸಂಘಟನೆಯವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪಟ್ಟಣದಲ್ಲಿ ತಾತ್ಕಾಲಿಕವಾಗಿ ಎರಡು ಸ್ಥಳಗಳಲ್ಲಿ ಗಣೇಶ ವಿಸರ್ಜನೆಗೆ ಸ್ಥಳ ಗುರುತಿಸಲಾಗಿದೆ ಎಂದು ಸಿಪಿಐ ದೀಪಕ್ ಬೂಸರೆಡ್ಡಿ ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್ ಮಾತನಾಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು. ಪರಿಸರಕ್ಕೆ ಹಾನಿ ಮಾಡುವ ಮೂರ್ತಿಗಳನ್ನು ಪ್ರತಿಷ್ಠಾಪಿಸುವವರ ವಿರುದ್ಧ ಪರಿಸರ ಮಾಲಿನ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದರು. ಪಿಎಸ್‌ಐ ಮಣಿಕಂಠ, ತಾಪಂ ಇಒ ಪರಮೇಶ್ವರಪ್ಪ, ಅಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ನರಸಪ್ಪ, ವಿವಿಧ ಸಂಘನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.