ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಈ ಬಾರಿಯ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ದೇವಿಯ ರಥದ ಮೆರವಣಿಗೆಯನ್ನು ಅದ್ದೂರಿಯಾಗಿ ಆಚರಿಸಬೇಕು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ನ.1ರಂದು ದೇವನಹಳ್ಳಿ ಟೌನ್‌ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಕಲ ಸಿದ್ದತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹಲ್ಮಿಡಿ ಶಾಸಕ ಅನಾವರಣ:
ನ.1 ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ 7.30 ಕ್ಕೆ ಧ್ವಜಾರೋಹಣ ಹಾಗೂ ನೂತನವಾಗಿ ನಿರ್ಮಿಸಿರುವ ಹಲ್ಮಿಡಿ ಶಾಸನ ಅನಾವರಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಬೆಳಗ್ಗೆ 9ಗಂಟೆಗೆ ದೇವನಹಳ್ಳಿ ಟೌನ್‌ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಜಿಲ್ಲಾಮಟ್ಟದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 8 ಗಂಟೆಗೆ ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ದೇವನಹಳ್ಳಿ ಕ್ರೀಡಾಂಗಣವರೆಗೆ ತಾಯಿ ಭುವನೇಶ್ವರಿದೇವಿಯ ರಥದ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ:
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ತಲುಪಿಸಿ ಎಂದು ದೇವನಹಳ್ಳಿ ತಾಲೂಕು ತಹಸೀಲ್ದಾರ್‌ಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರವನ್ನು ಅಚ್ಚುಕಟ್ಟಾಗಿ ನೆರವೇರಿಸಿ, ಪಥ ಸಂಚಲನಕ್ಕೆ ಅಗತ್ಯ ಕ್ರಮ ವಹಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಅಂದಿನ ಕಾರ್ಯಕ್ರಮದಲ್ಲಿ ಕನ್ನಡ ನಾಡು,ನುಡಿ, ಪರಂಪರೆಯನ್ನು ಪ್ರತಿನಿಧಿಸುವಂತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಇದಕ್ಕಾಗಿ ಆಯ್ಕೆ ಮಾಡಿದ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾದ ತರಬೇತಿ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯಲ್ಲಿನ ಗ್ರಾಮಾಂತರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇಗುಲದ ವತಿಯಿಂದ ಕನ್ನಡ ರಾಜ್ಯೋತ್ಸವದಂದು ಲಘು ಉಪಹಾರ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಿಬ್ಬಂದಿ ನೋಡಿಕೊಳ್ಳಬೇಕು. ಇಲಾಖೆ ಅಧಿಕಾರಿಗಳು ಸಿಬ್ಬಂದಿಗೆ ಮಾರ್ಗದರ್ಶನ ನೀಡುವ ಮೂಲಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು, ಆಯಾ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದರು.
ಲೋಪವಾಗದಂತೆ ಎಚ್ಚರಿಕೆ ಇರಲಿ:
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು, ಕುಡಿಯುವ ನೀರು ಸೇರಿ ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಸೂಚಿಸಿದರು.