ಬಾಗಲಕೋಟೆ ಜಿಲ್ಲಾ ನ್ಯಾಯಾಧೀಶರ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಾ ಪಸ್ತಾಪೂರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ದೇಶಪಾಂಡೆ ಉಪಸ್ಥಿತರಿದ್ದರು. 
ಜಿಲ್ಲೆ

ನ.12 ರಂದು ಮೇಗಾ ಲೋಕ ಅದಾಲತ್

ಬಾಗಲಕೋಟೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರಂದು ಮೇಗಾ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಾ ಪಸ್ತಾಪೂರ ಹೇಳಿದರು.
ಜಿಲ್ಲಾ ನ್ಯಾಯಾಧೀಶರ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ತಮ್ಮ ವಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಮೇಗಾ ಲೋಕ ಅದಾಲತ್ ಸುವರ್ಣವಕಾಶವನ್ನು ಕಲ್ಪಿಸಿದ್ದು, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸುವವರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇರುವ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ ಎಂದರು.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಜಿಲ್ಲಾ ಗ್ರಾಹಕರ ವೇಧಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಚೆಕ್ಕು ಅಮಾನ್ಯದ, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕರ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾದೀನ, ವೇತನ ಮತ್ತು ಭತ್ಯಗಳಿಗೆ ಸಂಬಂಧಿಸಿದ ಸೇವೆ ಮತ್ತು ಪಿಂಚಣಿ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಸದರಿ ಲೋಕ ಅದಾಲತ್ ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.
ಲೋಕ ಅದಾಲತ್ ನಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದಾಗಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಮೇಗಾ ಲೋಕ ಅದಾಲತ್ ಅನ್ನುವುದು ವಿಶೇಷ ಅವಕಾಶವಾಗಿರುತ್ತದೆ . ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಆಯಾ ತಾಲೂಕು ಕಾನೂನು ಸೇವಾ ಸಮಿತಿಗೆ ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ದೇಶಪಾಂಡೆ ಉಪಸ್ಥಿತರಿದ್ದರು.