ಹಾಸನ: ಹಾಸನ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಐದನೇ ವಾರ್ಡಿನ ಸದಸ್ಯೆ ಹೇಮಲತಾ ಕಮಲ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾದರು.
ನಗರಸಭೆಯ ಕುವೆಂಪು ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹೇಮಲತಾ ಅವರು ಮಾತ್ರವೇ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಾರುತಿ ಅವರು ಹೇಮಲತಾ ಅವರ ಆಯ್ಕೆಯನ್ನು ಅವಿರೋಧ ಎಂದು ಘೋಷಣೆ ಮಾಡಿದರು.
ಇದಕ್ಕೂ ಮೊದಲು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಎಲ್ಲ ಸದಸ್ಯರು ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯ ತೀರ್ಮಾನದಂತೆ ಹೇಮಲತಾ ಕಮಲ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಅದರಂತೆ ಎಲ್ಲ ಸದಸ್ಯರ ಸಮ್ಮುಖದಲ್ಲಿ ಹೇಮಲತಾ ಅವರು ಎರಡು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿ ಮಧ್ಯಾಹ್ನ 1.30ಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಲಾಯಿತು. ನಂತರ ನಡೆದ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆಯಲು ಅವಕಾಶ ಮಾಡಿಕೊಡಲಾಯಿತು. ನಂತರ ಅವಿರೋಧ ಎಂದು ಘೋಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಆವರಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ ಹಾಗೂ ಜೆಡಿಎಸ್, ಬಿಜೆಪಿ ಸದಸ್ಯರು ಹಾಜರಿದ್ದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ಹೇಮಲತಾ ಕಮಲ್ ಕುಮಾರ್ ಅವರನ್ನು ಅಭಿನಂದಿಸಿ ಗೌರವಿಸಿದರು.
ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ಕರೆಯುವಂತೆ ಜೆಡಿಎಸ್‌ನ ಸದಸ್ಯರು ಮತ್ತೆ ನಗರಸಭೆ ಆಯುಕ್ತರು ಮತ್ತು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹೇಮಲತಾ ಕಮಲ್ ಕುಮಾರ್ ಅವರಿಗೆ ಮನವಿ ಪತ್ರ ನೀಡಿದರು. ತಕ್ಷಣವೇ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕು. ಇನ್ನು 10 ದಿನದ ಒಳಗೆ ಸಭೆ ಕರೆಯಬೇಕು ಎಂದು ಮನವಿ ಮಾಡಲಾಯಿತು
ನಗರಸಭೆಯ ಎಲ್ಲ ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ವರಿಷ್ಠರು, ಶಾಸಕರು ಹಾಗೂ ಎಲ್ಲರ ಸಲಹೆ ಸೂಚನೆಗಳನ್ನು ಪಡೆದುಕೊಂಡು ನಗರದ ಅಭಿವೃದ್ಧಿಗೆ ಶ್ರಮಿಸುದಾಗಿ ನೂತನ ಉಪಾಧ್ಯಕ್ಷೆ ಹೇಮಲತಾ ಕಮಲ್ ಕುಮಾರ್ ತಿಳಿಸಿದರು.
ಚುನಾವಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದಂತಹ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ, ಎಚ್.ಡಿ. ರೇವಣ್ಣ, ಭವಾನಿ ರೇವಣ್ಣ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಸೂರಜ್ ರೇವಣ್ಣ ಹಾಗೂ ಸ್ಥಳೀಯ ಶಾಸಕ ಎಚ್.ಪಿ. ಸ್ವರೂಪ್ ಹಾಗೂ ಬಿಜೆಪಿಯ ಮಾಜಿ ಶಾಸಕರಾದ ಪ್ರೀತಂ ಗೌಡ ಹಾಗೂ ನಗರಸಭೆಯ ಎಲ್ಲ ಸದಸ್ಯರಿಗೂ ಕೂಡ ತುಂಬು ಹೃದಯದ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು.
ನಾನು ಮೊದಲ ಬಾರಿಗೆ ಸದಸ್ಯೆಯಾಗಿ ಆಯ್ಕೆಯಾಗಿ ಇಂದು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ನಗರದ ಸಮಸ್ಯೆಗಳಾದ ರಸ್ತೆ ಕುಡಿಯುವ ನೀರು ಚರಂಡಿ ವಿದ್ಯುತ್ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಎಲ್ಲ ಸದಸ್ಯರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.