ಹೊಸಕೋಟೆ: ಮುಂದಿನ ದಿನಗಳಲ್ಲಿ ನನ್ನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ನೀಡಿದ್ದಾರೆ ಎಂದು ಪೌರಾಡಳಿತ ಹಾಗೂ ಸಕ್ಕರೆ ಖಾತೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ನಗರದ ಕನಕ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ಲಸಿಕಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಸಿಎಂ ಜತೆ ಮಾತನಾಡಿದ್ದು, ಉಸ್ತುವಾರಿ ಸಚಿವರನ್ನು ಬದಲಿಸುವಾಗ ಈ ಬಾರಿ ನನಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಉಸ್ತುವಾರಿ ಜವಾಬ್ದಾರಿ ನೀಡುವುದಾಗಿ ಸಿಎಂ ತಿಳಿಸಿದ್ದಾರೆ ಎಂದರು.
18 ರಿಂದ 34 ವರ್ಷದ ಒಳಗಿನವರಿಗೆ ಈ ದಿನ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈಗಾಗಲೇ ತಾಲ್ಲೂಕಿನಲ್ಲಿ 78 ಸಾವಿರಕ್ಕೂ ಹೆಚ್ಚು ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ, ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದು, ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.
ಸರ್ಕಾರದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಿ ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳಿಗೆ ಲಸಿಕೆ ಹಾಕಿಸುವ ಕೆಲಸವನ್ನು ಮಾಡಬೇಕು. ಈಗ ಸುಮಾರು 700 ಜನರಿಗೆ ಎಂಟಿಬಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಲಸಿಕೆ ಹಾಕಿಸುತ್ತಿದ್ದು, ಬುಧವಾರ ಮತ್ತು ಗುರುವಾರ ನಗರದ ಪದವಿ ಕಾಲೇಜಿನಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಸಿಕೆ ಹಾಕಿಸಲಾಗುತ್ತದೆ ಎಂದರು.
ಎಂವಿಜೆ ಆಸ್ಪತ್ರೆಯ ಆಡಳಿತ ವ್ಯವಸ್ಥಾಪಕ ಡಾ. ಪ್ರಮೋದ್, ನಗರಸಭಾಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷೆ ಶೋಭಾ ಜುಂಜಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸೋಮಶೇಖರ್, ಟೌನ್ ಬ್ಯಾಂಕ್ ಉಪಾಧ್ಯಕ್ಷ ಬಾಲಚಂದ್ರನ್, ನಗರಸಭಾ ಸದಸ್ಯರಾದ ನಿತಿನ್, ಆನಂದ್, ದೇವರಾಜ್, ನಾಗರಾಜ್, ಗುಲ್ಜಾರ್, ಮುಖಂಡರಾದ ಕೋಳಿ ರಾಜಣ್ಣ, ರವಿ, ರಾಧ ಹಾಗೂ ಇತರರು ಭಾಗವಹಿಸಿದ್ದರು.