ಜಿಲ್ಲೆ

ನರೇಗಾ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲಿ: ಜಿಪಂ ಸಿಇಒ ಕಟ್ಟುನಿಟ್ಟಿನ ಸೂಚನೆ

Hassan - Ramesh H R

ಹಾಸನ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಆರ್. ಪೂರ್ಣಿಮಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಮಟ್ಟದ ಎಲ್ಲ ಅನುಷ್ಠಾನಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗೆ ಬುಧವಾರ ನಗರದ ಹಾಸನಾಂಭ ಕಲಾಭವನದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಡಾ.ಬಿ.ಆರ್. ಪೂರ್ಣಿಮಾ ಅವರು ಮಾತನಾಡಿ, ನರೇಗಾ ಯೋಜನೆಯು ಗ್ರಾಮೀಣ ಜನರ ಬದುಕಿಗೆ ಆಶಾದಾಯಕವಾಗಿದೆ. ರೈತರು ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇಲಾಖೆಗಳಡಿ ಹಲವಾರು ವೈಯಕ್ತಿಕ ಕಾಮಗಾರಿಗಳಾದ ಕೃಷಿಹೊಂಡ, ಬದು ನಿರ್ಮಾಣ, ತೋಟಗಾರಿಕಾ ಸಸಿಗಳನ್ನು ನೆಡುವುದು, ಹಣ್ಣಿನ ಗಿಡಗಳ ನಾಟಿ ಮುಂತಾದವುಗಳ ಮೂಲಕ ಕಾಮಗಾರಿಗಳನ್ನು ಅನುಷ್ಠಾನ ಮಾಡಿ ಆರ್ಥಿಕ ಸಹಾಯ ಪಡೆಯಬಹುದಾಗಿದೆ. ಸಮುದಾಯ ಕಾಮಗಾರಿಗಳಾದ ಕೆರೆ-ಕಟ್ಟೆಗಳ ಅಭಿವೃದ್ಧಿ, ರಸ್ತೆ ನಿರ್ಮಾಣ, ಗ್ರಾಮಗಳಲ್ಲಿ ಶುಚಿತ್ವ ಕಾಪಾಡಲು ವ್ಯವಸ್ಥಿತ ಚರಂಡಿ ನಿರ್ಮಾಣ, ಸೋಕ್ ಪಿಟ್ ನಿರ್ಮಾಣ, ಶಾಲಾ ಅಭಿವೃದ್ಧಿ ಕಾಮಗಾರಿಗಳು ಮುಂತಾದ ಗ್ರಾಮೀಣ ಮೂಲಭೂತ ಸೌಲಭ್ಯ ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಮೂಲಕ ದೀರ್ಘ ಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡಬಹುದು ಎಂದು ತಿಳಿಸಿದರು. ಹಾಗೆಯೇ ಪ್ರಸಕ್ತ ಸಾಲಿನಲ್ಲಿ ನೀಡಿರುವ ಗುರಿಯನ್ನು ಸಾಧಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಅವರು ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಮಾಡುವ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳು, ಕಾಮಗಾರಿ ಅನುಷ್ಠಾನದಲ್ಲಿ ಕಂಡುಬರುತ್ತಿರುವ ಲೋಪದೋಷಗಳು, ಸಾಮಾಜಿಕ ಲೆಕ್ಕ ಪರಿಶೋಧನೆ ಹಾಗೂ ತೀರುವಳಿ ಬಗ್ಗೆ ಸವಿವರವಾಗಿ ವಿವರಿಸಿದರು. ಎಲ್ಲ ಅನುಷ್ಠಾನಾಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ನರೇಗಾ ಮಾರ್ಗಸೂಚಿಯಂತೆ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ತಫ್ ಜುಲ್ ಹುಸೇನ್ ಮಾತನಾಡಿ, ನರೇಗಾ ಕಾಮಗಾರಿಗಳ ಅನುಷ್ಠಾನದಲ್ಲಿ ಸಾಮಗ್ರಿ ಖರೀದಿಗೆ ಸಂಬಂಧಿಸಿದಂತೆ ಟೆಂಡರ್, ಕೊಟೇಶನ್ ಕರೆಯುವುದು, ತೆರಿಗೆ ಕಟಾವು ಮಾಡುವುದು, ಮುಂತಾದ ಲೆಕ್ಕ ಶಾಖೆಗೆ ಸಂಬಂಧಿಸಿದ ವಿಷಯಗಳನ್ನು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು, ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.