ಹನೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ನರೇಗಾ ಯೋಜನೆಯಡಿ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 62 ಕಾಮಗಾರಿಗಳು ನಡೆದಿದ್ದು, 88.59 ಲಕ್ಷ ರೂ.ಅನುದಾನ ಖರ್ಚು ಮಾಡಲಾಗಿದೆ ಎಂದು ನರೇಗಾ ತಾಲೂಕು ಸಂಯೋಜಕ ನಾರಾಯಣ್ ತಿಳಿಸಿದರು.
ತಾಲೂಕಿನ ಪಿ.ಜಿ ಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ತಪಾಸಣಾ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯಲ್ಲಿ ಮಾತನಾಡಿದರು. ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ, ದನದ ಕೊಟ್ಟಿಗೆ, ಜಮೀನು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಕೆರೆ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಒಂದು ವರ್ಷದ ಅವಧಿಯಲ್ಲಿ ವಸತಿ ಯೋಜನೆಗೆ ಅನುದಾನ, ಹಳ್ಳ, ಕಾಲುವೆ ಹೂಳೆತ್ತುವ ಕಾಮಗಾರಿ, ಕೊಟ್ಟಿಗೆ ನಿರ್ಮಾಣ, ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರಿನ ತೊಟ್ಟಿ, ಮೆಟ್ಲಿಂಗ್ ರಸ್ತೆ ನಿರ್ಮಾಣ ಸೇರಿದಂತೆ 62 ಕಾಮಗಾರಿಗಳು ನಡೆದಿವೆ. ಕೂಲಿ ವೆಚ್ಚ 35,86,318 ರೂ. ಹಾಗೂ ಸಾಮಗ್ರಿ ವೆಚ್ಚ 52,73,643 ರೂ. ಸೇರಿದಂತೆ 88,59,960 ರೂ.ಅನುದಾನ ಖರ್ಚು ಮಾಡಲಾಗಿದೆ. ನಡೆದಿರುವ ಕಾಮಗಾರಿಗಳನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿದೆ. ಆದ್ದರಿಂದ ಆಕ್ಷೇಪಣೆಗಳಿದ್ದಲ್ಲಿ ಗ್ರಾಮಸ್ಥರು ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಪಿಡಿಒ ನಂಜುಂಡಸ್ವಾಮಿ ಮಾತನಾಡಿ, ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ಪ್ರತಿ ಕುಟುಂಬವೂ ಉದ್ಯೋಗ ಪಡೆಯಬಹುದಾಗಿದೆ. ಇದರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಪ್ರತಿಯೊಬ್ಬರೂ ಯೋಜನೆಯ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಇದೇ ವೇಳೆ 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಖರ್ಚು ವೆಚ್ಚದ ವಿವರವನ್ನು ಮಂಡಿಸಲಾಯಿತು. ಗ್ರಾಪಂ ಅಧ್ಯಕ್ಷ ಸಂತೋಷ್, ಉಪಾಧ್ಯಕ್ಷೆ ಸುಶೀಲಾ, ಸದಸ್ಯರಾದ ಕೃಷ್ಣಮೂರ್ತಿ, ಮಾದೇಶ್, ನಿಂಗರಾಜು, ಮಹದೇವಸ್ವಾಮಿ, ನೀಲಾ, ಎಸ್‌ಡಿಎ ಶಂಕರ್ ಇನ್ನಿತರರಿದ್ದರು.