ಮೈಸೂರು: ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾದರೆ ತಪ್ಪೇನು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಪ್ರಶ್ನಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.12ಕ್ಕೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಚರ್ಚೆ ಮಾಡಲಾಗುತ್ತದೆ. ನಾವೆಲ್ಲರೂ ಒಮ್ಮತದಿಂದ ನಿಖಿಲ್ ಕುಮಾರಸ್ವಾಮಿ ಪರ ನಿಲ್ಲುತ್ತೇವೆ. ಕುಮಾರಣ್ಣ ಕೂಡ ಕಾರ್ಯಕರ್ತರು, ಶಾಸಕರ ಅಭಿಪ್ರಾಯ ಪಡೆಯುತ್ತಾರೆ ಎಂದು ಹೇಳಿದರು.
ಎಲ್ಲ ಪಕ್ಷದಲ್ಲೂ ಕುಟುಂಬ ರಾಜಕಾರಣ ಇದೆ. ಪಕ್ಷದ ಒಳಿತಿಗಾಗಿ, ಸಂಘಟನೆಯ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ಆಯ್ಕೆ ಒಳ್ಳೆಯದು. ಚುನಾವಣೆಯಲ್ಲಿ ಸೋತವರು, ಪಿಎಂ, ಸಿಎಂ ಆಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದು ಹೇಳಿದರು.
ಶಾಸಕ ಜಿ.ಟಿ.ದೇವೇಗೌಡ ಅವರನ್ನು ಸಭೆಗೆ ಕರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ, ಆ ಬಗ್ಗೆ ನಮ್ಮ ಪಕ್ಷದ ವರಿಷ್ಠರು ಮಾತನಾಡುತ್ತಾರೆ ಎಂದರು.