ಬೆಂಗಳೂರು ಗ್ರಾಮಾಂತರ: ಪ್ರತಿಯೊಂದು ಜೀವವು ಅತ್ಯಮೂಲ್ಯವಾಗಿದ್ದು, ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತರ ಕುಟುಂಬ ಅನಾಥರಾಗುವುದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮ ಅನುಸರಿಸದಿದ್ದರೆ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಎಚ್ಚರಿಕೆ ನೀಡಿದರು.
ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಗುರುತಿಸಿರುವ ಅಪಘಾತ ವಲಯಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಅಲ್ಲದೆ ಅಪಘಾತ ಸಂಭವಿಸಿದ ತಕ್ಷಣವೇ ಆಂಬುಲೆನ್ಸ್ ಸೇರಿ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ವ್ಯಾಪ್ತಿಯಲ್ಲಿರುವ ಹೆದ್ದಾರಿ ಪ್ರಾಧಿಕಾರದ ಕ್ರೇನ್, ಆಂಬ್ಯುಲೆನ್ಸ್, ಪೆಟ್ರೋಲಿಂಗ್ ವಾಹನಗಳ ಪ್ರಸ್ತುತ ಸ್ಥಿತಿಗತಿ ಬಗ್ಗೆ ಸಮಗ್ರ ಮಾಹಿತಿಯನ್ನು ನಿಗದಿತ ದಿನಾಂಕದೊಳಗೆ ನೀಡಬೇಕು ಹಾಗೂ ಪ್ರಯಾಣಕ್ಕೆ ಅಡಚಣೆಯಾಗುವ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.
2019ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 680 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ವರದಿಯಾಗಿದ್ದು, ಮುಂದಿನ ದಿನಗಳಲ್ಲಿ ಸಾವಿನ ಪ್ರಮಾಣ ಕಡಿಮೆ ಮಾಡಲು ಇಲಾಖೆಗಳು ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳು ಮತ್ತು ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್ ಮಾತನಾಡಿ, ಜಿಲ್ಲೆಯಲ್ಲಿ 60 ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಅವುಗಳ ಪೈಕಿ 15 ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರತಿ ದಿನ 2-3 ಅಪಘಾತ ಸಂಭವಿಸುತ್ತಿದ್ದು, ಮುಂದಿನ ವರ್ಷದೊಳಗೆ ಅಪಘಾತ ಪ್ರಮಾಣದಲ್ಲಿ ಶೇ.10 ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಉತ್ತರ ಕರ್ನಾಟಕದಿಂದ ರಾಜಧಾನಿಗೆ ಬರಲು ನೆಲಮಂಗಲ ಹೆಬ್ಬಾಗಿಲು ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್ ಸಿಬ್ಬಂದಿ ಯಾರೊಂದಿಗೂ ಅನುಚಿತವಾಗಿ ವರ್ತಿಸಬಾರದು. ಟೋಲ್‌ಗಳಲ್ಲಿ ಅಗತ್ಯವಿರುವ ಕಡೆ ಪೊಲೀಸ್ ಇಲಾಖೆಯಿಂದ ಹೋಮ್‌ಗಾರ್ಡ್ ನಿಯೋಜಿಸಿ ಭದ್ರತೆ ಒದಗಿಸಲಾಗುವುದು ಎಂದರು.
ಪ್ರಮುಖ ಸ್ಥಳಗಳಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು, ಹೆದ್ದಾರಿಯಲ್ಲಿ ಜಿಬ್ರಾ ಪಟ್ಟಿ ಮಾರ್ಕಿಂಗ್, ಅಂಡರ್ ಪಾಸ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಹೆದ್ದಾರಿ ಪಕ್ಕದ ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ ಅಪಘಾತಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಬಕಾರಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಪಘಾತ ಪ್ರಕರಣಗಳಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳು ಅಪಘಾತ ಸಂಭವಿಸಿದ ವ್ಯಕ್ತಿಗಳನ್ನು ಪರೀಕ್ಷಿಸಿ ವರದಿಯನ್ನು ಶೀಘ್ರವಾಗಿ ನೀಡಬೇಕು ಎಂದರು.
ಹೆದ್ದಾರಿಯಲ್ಲಿ ಅಗತ್ಯವಿರುವ ಕಡೆ ಸ್ಕೈವಾಕ್ ನಿರ್ಮಿಸಬೇಕು ಹಾಗೂ ನಿಗದಿತ ನಿಲುಗಡೆ ಸ್ಥಳಗಳಲ್ಲಿ ಮಾತ್ರ ಸರ್ಕಾರಿ ಮತ್ತು ಬಸ್ ನಿಲ್ಲಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.