ಚಾಮರಾಜನಗರ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೂತನವಾಗಿ ಸ್ಥಾಪಿಸಿದ್ದ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವ ವಿದ್ಯಾಲಯಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚುವ ಪ್ರಯತ್ನ ಮಾಡಿದರೇ ವಿದ್ಯಾರ್ಥಿ ಚಳುವಳಿ ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಎಚ್ಚರಿಕೆ ನೀಡಿದರು.
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಸಚಿವ ಸಂಪುಟ ಸಭೆ ನಡೆಸಿ, ರಾಜ್ಯದಲ್ಲಿ ನೂತನವಾಗಿ ಸ್ಥಾಪನೆಯಾದ 10 ವಿಶ್ವ ವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಅನುದಾನದ ಕೊರತೆಯಿಂದ ಮುಚ್ಚಲು ಕ್ರಮವಹಿಸಿದ್ದಾರೆ. ಈ ಮೂಲಕ ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯದಿಂದ ವಂಚಿತರಾಗುವಂತೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಸಂಚಕಾರ ತಂದೊದಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
2013 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನೂತನ ವಿಶ್ವವಿದ್ಯಾಲಯಗಳನ್ನು ಪ್ರಾರಂಭಮಾಡಿತ್ತು. ಅಂದಿನ ಸಂಸದರಾದ ಶ್ರೀನಿವಾಸ್ ಪ್ರಸಾದ್, ನಾನು ಮತ್ತು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಒತ್ತಾಯದಂತೆ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಸ್ಥಾಪನೆ ಮಾಡಲಾಗಿತ್ತು. ಆದರೇ ಇಂದಿನ ಕಾಂಗ್ರೆಸ್ ಸರ್ಕಾರ ಉನ್ನತ ಶಿಕ್ಷಣವನ್ನು ವ್ಯಾಪಾರೀಕರಣದ ಮನೋಭಾವದಲ್ಲಿ ನೋಡುತ್ತಿದೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ. ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿಲ್ಲಾ ಮಾಧ್ಯಮ ವಕ್ತಾರ ಕಾಡಹಳ್ಳಿ ಕುಮಾರ್, ಮಾಧ್ಯಮ ಸಹ ಸಂಚಾಲಕ ಶಿವು ರಾಮಸಮುದ್ರ ಹಾಜರಿದ್ದರು.