ಹೊಳೆನರಸೀಪುರ: ನ್ಯಾಯಾಂಗ ವ್ಯವಸ್ಥೆಯಲ್ಲಿ ಬಡವರಿಗೆ ನಿರೀಕ್ಷಿತ ಮಟ್ಟದಲ್ಲಿ ನ್ಯಾಯ ದೊರಕುತ್ತಿಲ್ಲ ಎಂದು ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ವಿಷಾದ ವ್ಯಕ್ತಪಡಿಸಿದರು.
ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಜೋಡಿಗುಬ್ಬಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಂಕುಸ್ಥಾಪನೆ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ರಾಜಕೀಯ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ವ್ಯವಸ್ಥೆ ಉತ್ತಮವಾಗಿಲ್ಲ. ಬಡವರಿಗೆ ನ್ಯಾಯ ಸಿಗುತ್ತಿಲ್ಲ, ನ್ಯಾಯಾಂಗವನ್ನೇ ನಂಬಿರುವವರು ಈ ವ್ಯವಸ್ಥೆಯಿಂದ ಬಹಳ ತೊಂದರೆ ಅನುಭವಿಸುತ್ತಾರೆ. ನ್ಯಾಯಾಂಗದಿಂದ ಬಡ ಜನತೆಗೆ ಶೀಘ್ರ ನ್ಯಾಯ ಸಿಗಬೇಕು ಎಂದು ಹೇಳಿದರು.
ದೇಶ ಹಾಗೂ ರಾಜ್ಯದಲ್ಲಿ ರಾಜಕಾರಣ ಕವಲು ದಾರಿಯಲ್ಲಿದೆ. ಶಾಸಕಾಂಗ, ಕಾರ್ಯಾಂಗ ವ್ಯವಸ್ಥೆ ಚೆನ್ನಾಗಿಲ್ಲ. ಈ ವ್ಯವಸ್ಥೆಯನ್ನು ಸರಿಪಡಿಸಬೇಕಾದವರು ಸಾರ್ವಜನಿಕರು. ಪ್ರಜಾಪ್ರಭುತ್ವದ ಮಾಲೀಕರಾದ ಸಾರ್ವಜನಿಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ ಮೌಲ್ಯಗಳು ಕ್ಷಿಣಿಸದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ಪ್ರಜೆಗಳದ್ದು ಎಂದರು.
ಜೋಡಿಗುಬ್ಬಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಜೀವಜಲ ಸೌಲಭ್ಯ ಒದಗಿಸಲು 1,34,61,000 ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು. ಹಳ್ಳಿ ಮೈಸೂರು ಹೋಬಳಿ ವ್ಯಾಪ್ತಿಯ 11 ಅಭಿವೃದ್ಧಿ ಕಾಮಗಾರಿಗಳಿಗೆ 10 ಕೋಟಿ 81 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಚಾಲನೆ ನೀಡಿದ್ದೇವೆ. ಕಾಂಕ್ರೀಟ್ ರಸ್ತೆಯನ್ನು ಅಗೆಯದೆ ಯಂತ್ರಗಳಿಂದ ಕಾಮಗಾರಿ ನಿರ್ವಹಿಸಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಮಸ್ಥರು ಅಭಿವೃದ್ಧಿ ಕೆಲಸಗಳನ್ನು ಉತ್ತಮ ರೀತಿಯಲ್ಲಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿಲ್ಲಾ ಪಂಚಾಯತ್ ಇಂಜಿನಿಯರ್ ಪ್ರಶಾಂತ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.