ಮೈಸೂರು: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್‌ಒ ವತಿಯಿಂದ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.
ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ, ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಈವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿವೆ. ತರಗತಿಗಳು ಸರಿಯಾಗಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆ ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಹೇಮಾ ಮಾತನಾಡಿ, ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರ ಪಾಲಿಸುವುದು ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ನಿರ್ದೇಶನವಿದೆ.
ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಮೂಲಕ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಬೇಕೆಂದು ಆಗ್ರಹಿಸಿದರು.
ರೈತ ಸಂಘಟನೆಯ ಮುಖಂಡ ಬನ್ನೂರು ನಾರಾಯಣಸ್ವಾಮಿ ಹೋರಾಟ ಬೆಂಬಲಿಸಿ ಮಾತನಾಡಿದರು. ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವಿದ್ಯಾರ್ಥಿ ಸಂಘಟನೆಯ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಜಿಲ್ಲಾ ಅಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಿಕಾ, ಅಭಿಷೇಕ್, ಅಂಜಲಿ, ದಿಶಾ, ನಂದೀಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.