ಜಿಲ್ಲೆ

ಪರಭಾಷಿಕರಿಗೆ ಕನ್ನಡ ಕಲಿಸಿ

ಸೋಮವಾರಪೇಟೆ: ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಸೋಮವಾರ ಸಂಜೆ ಪಟ್ಟಣಕ್ಕೆ ಆಗಮಿಸಿದ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ಆಡಳಿತದಿಂದ ಕಕ್ಕೆಹೊಳೆ ಜಂಕ್ಷನ್‌ನಲ್ಲಿ ಬರಮಾಡಿಕೊಳ್ಳಲಾಯಿತು.

ಸ್ತ್ರೀಶಕ್ತಿ ಗುಂಪಿನಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರು ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಿಸಿ ಸ್ವಾಗತಿಸಿದರು.

ಶ್ರೀಬಸವೇಶ್ವರ ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಕನ್ನಡ ಜ್ಯೋತಿ ರಥವನ್ನು ಮೆರವಣಿಗೆ ನಡೆಯಿತು. ಜೇಸಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದ ಧ್ಯಕ್ಷತೆಯನ್ನು ತಹಸೀಲ್ದಾರ್ ವಹಿಸಿದ್ದರು.

ಮುಖ್ಯ ಭಾಷಣಕಾರರಾಗಿ ಉಪಸ್ಥಿತರಿದ್ದ ಕವಯತ್ರಿ ಹಾಗೂ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಜಲಾ ಕಾಳಪ್ಪ ಮಾತನಾಡಿ, ಕನ್ನಡಕ್ಕೆ 2ಸಾವಿರ ವರ್ಷಗಳ ಇತಿಹಾಸವಿದೆ. 8 ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡಕ್ಕಿದೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ಮಾತನಾಡುವ ಮೂಲಕ ಹಾಗೂ ನಾಡಿನಲ್ಲಿ ನೆಲೆಸಿರುವ ಪರಭಾಷಿಕರಿಗೆ ಕನ್ನಡ ಕಲಿಸುವ ಮೂಲಕ ಮಾತೃಭಾಷೆಯನ್ನು ಶ್ರೀಮಂತಗೊಳಿಸಬೇಕು ಎಂದು ಹೇಳಿದರು.

ಕನ್ನಡ ಸಾಹಿತಿಗಳಿಗೆ, ಕವಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಸಹಕಾರ ನೀಡಬೇಕು. ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷಾ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯದ ಪುಸ್ತಕಗಳನ್ನು ನೀಡಬೇಕು ಎಂದು ಹೇಳಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ನಿಯೋಜಿತ ಬಿಇಒ ಹೇಮಂತ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯೆ ಶೀಲಾ ಡಿಸೋಜ, ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್, ಮೀನುಗಾರಿಕಾ ಸಹಾಯಕ ನಿರ್ದೇಶಕಿ ಮಿಲನಾ ಭರತ್, ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯ ಎಚ್.ಸಿ.ನಾಗೇಶ್, ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಜೆ.ಸಿ.ಶೇಖರ್, ಜಲಜಾ ಶೇಖರ್, ಜವರಪ್ಪ, ಎ.ಪಿ.ವೀರರಾಜು, ಬಿ.ಈ.ಜಯೇಂದ್ರ, ಕೆ.ಪಿ.ದಿನೇಶ್, ಜ್ಯೋತಿ ಅರುಣ್, ವಸಂತಿ ರವೀಂದ್ರ ಮತ್ತಿತರ ಗಣ್ಯರು ಇದ್ದರು.

ವಿದ್ಯಾರ್ಥಿಗಳು ಹಾಗೂ ಕನ್ನಡ ಸಾಹಿತ್ಯಾಭಿಮಾನಿಗಳಿಂದ ಕನ್ನಡ ಗೀತಾಗಾಯನ ನಡೆಯಿತು.