ಕೋಲಾರ: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಅತ್ಯಾಚಾರ ಹಾಗೂ ಅನಾವಶ್ಯಕ ಸಮಸ್ಯೆ ಎದುರಾದರೆ ಜಿಲ್ಲಾಡಳಿತ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಮಸ್ಯೆಗಳನ್ನು ಬಗೆಹರಿಸಲು ಬದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅನುಸೂಚಿತ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲಾಗುವುದು ಎಂದರು.
ಜಿಲ್ಲೆಯಾದ್ಯಂತ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಈ ಹಿಂದೆ ನೀಡಲಾಗಿದ್ದು, ಕೆಲವು ಪ್ರಕರಣಗಳು ನ್ಯಾಯಾಲಯ ಮಟ್ಟದ್ದಲ್ಲಿದ್ದು, ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಮಶಾನ ಭೂಮಿ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಿಗಮ, ಮಂಡಳಿಗಳ ರಿಯಾಯಿತಿ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಯಲ್ಲಿ ಸಮಸ್ಯೆ ಎದುರಾದರೆ ಬ್ಯಾಂಕ್‌ಗಳು ತಮ್ಮ ಗಮನಕ್ಕೆ ತರಬೇಕೆಂದು ಸೂಚಿಸಿದರು.
ದೇವಾಲಯಗಳ ಪ್ರವೇಶಕ್ಕೆ ಸಮುದಾಯಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಸಮಿತಿ ಸದಸ್ಯರು ಮನವಿ ಮಾಡಿದಾಗ ಮುಜರಾಯಿ ಇಲಾಖೆ ಹಾಗೂ ಉಪವಿಭಾಗಾಧಿಕಾರಿಗಳ ಮೂಲಕ ಮುಕ್ತ ಪ್ರವೇಶ ದೊರಕುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಗಳಲ್ಲಿ ಶೇಕಡ ೬೦ ರಷ್ಟು ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆಯಿದ್ದು, ವಿದ್ಯಾರ್ಥಿನಿಲಯಗಳಲ್ಲಿ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವೇತನ ಸರಿಯಾಗಿ ಹಂಚಿಕೆಯಾಗಿರುವುದಿಲ್ಲ, ಸರ್ಕಾರಕ್ಕೆ ಸಿಬ್ಬಂದಿ ನೀಡಲು ಮನವಿ ಸಲ್ಲಿಸಿದ್ದು, ಮುಂದೆ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದರು.
ನಿಗಮ ಮಂಡಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸೂಕ್ತ ಸ್ಪಂದನೆ ಲಭ್ಯವಾಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಹಯೋಗದೊಂದಿಗೆ ವ್ಯಾಪಕ ಪ್ರಚಾರ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮುಂಬರುವ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದರು.
ಜಿಲ್ಲಾಡಳಿತವು ಕೌಶಲ್ಯಾಭಿವೃದ್ಧಿ ಹಾಗೂ ವೃತ್ತಿ ತರಬೇತಿ ಕಾರ್ಯಕ್ರಮ, ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು. ಕೆಜಿಎಫ್‌ನಲ್ಲಿ ಪೌರಕಾರ್ಮಿಕರಿಗಾಗಿ ಮನೆಗಳನ್ನು ನಿರ್ಮಿಸಿದ್ದು, ಈ ತಿಂಗಳಲ್ಲಿ ಹಸ್ತಾಂತರಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಜಿಪಂ ಸಿಇಒ ಪದ್ಮಾಬಸಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತಕುಮಾರ್, ಉಪ ವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಶ್ರೀನಿವಾಸನ್ ಮತ್ತಿತರರು ಉಪಸ್ಥಿತರಿದ್ದರು.
ಸಕಾಲ, ಭೂಮಿ, ಮುಂತಾದ ಯೋಜನೆಗಳ ಅಂಕಿ ಅಂಶಗಳಲ್ಲಿ ೩೦ನೇ ಸ್ಥಾನದಲ್ಲಿ ಹಿಂದುಳಿದ್ದ ಜಿಲ್ಲೆ ಈಗ ೫ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಚುನಾವಣೆ ಸಂಬಂಧ ಮತಗಟ್ಟೆಗಳ ಒಟ್ಟುಗೂಡುಸುವಿಕೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ.-ಅಕ್ರಂಪಾಷ, ಜಿಲ್ಲಾಧಿಕಾರಿ