ಬಾಗಲಕೋಟೆ: ಜಿಲ್ಲೆಯಲ್ಲಿ ಶುಕ್ರವಾರ ಜರುಗಿದ ಎಸ್.ಎಸ್.ಎಲ್.ಸಿ ಮೊದಲ ದಿನ ಕನ್ನಡ ವಿಷಯ ಪರೀಕ್ಷೆ ನಡೆದಿದ್ದು, ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಜಾನಕಿ ಕೆಂ.ಎಂ ಅವರು ನಗನಗರದ ಅಂಜುಮನ್ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಸುಸೂತ್ರವಾಗಿ ನಡೆದ ಬಗ್ಗೆ ಪರಿಶೀಲಿಸಿದರೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ನವನಗರದ ಅಂಜುಮನ್ ಹಾಗೂ ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಸ್ಥಾಪಿಸಲಾದ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ ಜಾನಕಿ ಅವರು ಕೇಂದ್ರಕ್ಕೆ ನೇಮಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿಗಳು ಪರೀಕ್ಷಾ ಕೇಂದ್ರಗಳ ಮೇಲೆ ನಿಗಾವಹಿಸಲು ಸೂಚಿಸಿದರೆ, ಜಿ.ಪಂ ಸಿಇಓ ಅವರು ವೆಬ್‍ಕಾಸ್ಟಿಂಗ್ ಕೇಂದ್ರದಲ್ಲಿ ಕಡಿಮೆ ಸಿಬ್ಬಂದಿಗಳು ಇರುವದನ್ನು ಕಂಡು ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆಯದಂತೆ ಕ್ರಮವಹಿಸಲು ಸೂಚಿಸಿದರು.
ಶುಕ್ರವಾರ ನಡೆದ ಕನ್ನಡ ವಿಷಯ ಪರೀಕ್ಷೆಗೆ 31366 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 31002 ವಿದ್ಯಾರ್ಥಿಗಳು ಹಾಜರಾಗಿ 364 ಜನ ಗೈರು ಹಾಜರಾಗಿರುತ್ತಾರೆ. ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿರುವದಿಲ್ಲವೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.