ಜಿಲ್ಲೆ

ಪಾಂಚಜನ್ಯ ಹಿಂದು ಗಣಪತಿಯ ಅದ್ದೂರಿ ಮೆರವಣಿಗೆ

ಹಾಸನ: ಪಾಂಚಜನ್ಯ ಹಿಂದು ಗಣಪತಿ ವಿಸರ್ಜನಾ ಮಹೋತ್ಸವದ ಮೆರವಣಿಗೆ ಹಾಗೂ ಭವ್ಯ ಶೋಭಾಜಾತ್ರೆ ನಗರದಲ್ಲಿ ಗುರುವಾರ ಅದ್ದೂರಿಯಾಗಿ ನಡೆದು, ರಾತ್ರಿ 9 ಗಂಟೆಯ ಸಮಯದಲ್ಲಿ ನಗರದ ದೇವಿಗೆರೆ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ನಗರದ ಹಾಸನಾಂಬ ಕಲಾ ಕ್ಷೇತ್ರದಿಂದ ಆರಂಭವಾದ ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಡಿಜೆ ಸೌಂಡ್‌ಗೆ ಯುವಕ- ಯುವತಿಯರು ಕುಣಿದು ಕುಪ್ಪಳಿಸಿದ್ದರು. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ನೋಡುಗರನ್ನು ಆಕರ್ಷಿಸಿದವು. ಬೃಹತ್ ಶೋಭಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ರಾತ್ರಿ ನಗರದ ದೇವಿಗೆರೆ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಮೆರವಣಿಗೆ ಸಂದರ್ಭದಲ್ಲಿ ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ 400ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ, 4 ಜಿಲ್ಲಾ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿತ್ತು. ವಲ್ಲಭ್ ಬಾಯ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಯಾವುದೇ ರೀತಿ ದುರ್ಘಟನೆ ನಡೆಯದಂತೆ ನಗರದಾದ್ಯಂತ ಖಾಕಿ ಸರ್ಪಗಾವಲು ಹಾಕಲಾಗಿತ್ತು. ಜತೆಗೆ ಬುಧವಾರ ಮತ್ತು ಗುರುವಾರ ನಗರಸಭೆ ವ್ಯಾಪ್ತಿಯಲ್ಲಿ ಎಲ್ಲ ಮದ್ಯದ ಅಂಗಡಿಗಳನ್ನು ತೆರವಿಗೆ ನಿಷೇಧ ವಿಧಿಸಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ ಗೌಡ, ಶಾಸಕರಾದ ಹುಲ್ಲಳ್ಳಿ ಸುರೇಶ್, ಸಿಮೆಂಟ್ ಮಂಜು, ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ವೇಣುಗೋಪಾಲ್ ಸೇರಿದಂತೆ ಇತರರು ಇದ್ದರು.