ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯನ್ನು ಅಭಿವೃದ್ಧಿ ಮತ್ತು ಹಿಂದುತ್ವದ ಆಧಾರದಲ್ಲಿ ಬಿಜೆಪಿ ಎದುರಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ನಗರದ ಧರ್ಮನಾಥ ಭವನದಲ್ಲಿ ಬಿಜೆಪಿ ನಗರ ಘಟಕ ಶನಿವಾರ ಹಮ್ಮಿಕೊಂಡಿದ್ದ ಚುನಾವಣೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಹಲವು ದಶಕಗಳಿಂದ ಪಾಲಿಕೆ ಚುನಾವಣೆ ಭಾಷೆ ಆಧಾರದ ಮೇಲೆ ನಡೆಯುತಿತ್ತು. ಈ ವೇಳೆ ಪಕ್ಷದ ಕಾರ್ಯಕರ್ತರು ಕೂಡ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸುತ್ತಿದ್ದರು. ಆದರೆ, ಈ ಬಾರಿ ಪಕ್ಷದ ಚಿಹ್ನೆಯಡಿಯಲ್ಲೇ ಚುನಾವಣೆ ಎದುರಿಸುವ ಹೊಸ ಪ್ರಯೋಗದಲ್ಲಿ ಬಿಜೆಪಿ ಯಶ ಕಾಣಲಿದೆ ಎಂದರು.
ಜನರಿಗೆ ತಿಳಿವಳಿಕೆ: ನಾಡಿನ ಜನರೂ ಸಹ ಈ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯನ್ನ ಅತ್ಯಂತ ಕುತೂಹಲದಿಂದನೋಡುತ್ತಿದ್ದಾರೆ. ಸ್ವಾಭಿಮಾನದಿಂದ ಬದುಕುತ್ತಿರುವ ಬೆಳಗಾವಿಗರು ಅತ್ಯಂತ ಬುದ್ಧಿವಂತರು. ಅಭಿವೃದ್ಧಿ ಮತ್ತು ಹಿಂದುತ್ವಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಬಿಜೆಪಿಯ ಅಭ್ಯರ್ಥಿಗಳನ್ನೇ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ನಮಗೆಲ್ಲರಿಗೂ ಇದೆ. ಹಾಗಾಗಿ ಪ್ರತಿ ವಾರ್ಡ್‌ನಲ್ಲಿ ಮನೆ ಮನೆಗೆ ತೆರಳಿ ನಮ್ಮ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ತಿಳಿವಳಿಕೆ ಮಾಡುವ ಕೆಲಸವನ್ನೂ ಬಿಜೆಪಿ ಮಾಡಲಿದೆ ಎಂದರು.
ನಮಗೇ ಅಧಿಕಾರ: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಈ ಬಾರಿ ಬಿಜೆಪಿಯ ಮೇಯರ್, ಉಪಮೇಯರ್ ಅಧಿಕಾರ ಸ್ವೀಕರಿಸುವುದು ಖಚಿತ. ವಾರ್ಡ್‌ಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪ್ರತಿ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಮೊದಲ ಆದ್ಯತೆ ನೀಡಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳಗಾವಿ ನಗರ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ, ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ ಎಂದರು.
ಎಲ್ಲರನ್ನೂ ಗೆಲ್ಲಿಸೋಣ: ಶಾಸಕ ಅಭಯ ಪಾಟೀಲ ಮಾತನಾಡಿ, 1960ರಿಂದ 2020ರ ನಡುವಿನ ಅವಧಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರರಾಗಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರು. ಆದರೆ, 2021 ಅಭಿವೃದ್ಧಿ ಯುಗವಾಗಿದ್ದರಿಂದ ಪಕ್ಷದ ಚಿಹ್ನೆಯಡಿ ಚುನಾವಣೆ ಎದುರಿಸುತ್ತಿದ್ದೇವೆ. ಇದು ನಮ್ಮ ಕಾರ್ಯಕರ್ತರ ಚುನಾವಣೆಯಾಗಿದ್ದರಿಂದ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ,
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಬಿಜೆಪಿ ನಗರ ಘಟಕದ ಉಸ್ತುವಾರಿ ರಮೇಶ ದೇಶಪಾಂಡೆ ಇತರರು ಇದ್ದರು.
ಬೆಳಗಾವಿ ಮಹಾನಗರ ಪಾಲಿಕೆಗೆ ಸೆ. 3ರಂದು ಜರುಗುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ನಡೆಸಲು ಆ. 29ರಂದು ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ, ಸಾರಿಗೆ ಸಚಿವ ಬಿ. ಶ್ರೀರಾಮುಲು, ಆ. 30ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸೆ. 1ರಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಇಂಧನ ಸಚಿವ ಸುನೀಲಕುಮಾರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ ಆಗಮಿಸಲಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ರೋಡ್ ಶೋಗೆ ಬರುವಂತೆ ಮನವಿ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯ ಮುಖಂಡ ಹಾಗೂ 37ನೇ ವಾರ್ಡ್‌ನ ಸದಸ್ಯ ರವಿ ಶಿಂಧೆ ಅವರು ಬಿಜೆಪಿ ಸಚಿವರು, ಶಾಸಕರ ಸಮ್ಮುಖದಲ್ಲಿ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಶನಿವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಬಳಿಕ ಮಾತನಾಡಿದ ಅವರು, ವಾರ್ಡ್‌ಗಳ ಸಮಗ್ರ ಅಭಿವೃದ್ಧಿ, ಮರಾಠ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ ಎಂದರು.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗಾಗಿಯೇ ಸಚಿವರು, ಶಾಸಕರು, ಪಕ್ಷದ ಮುಖಂಡರು ಈ ಚುನಾವಣೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ವಾರ್ಡ್‌ಗಳ ಸಮಗ್ರ ಅಭಿವೃದ್ಧಿ ವಿಷಯ ಮುಂದಿಟ್ಟುಕೊಂಡು ನಾವೆಲ್ಲ ಪ್ರಚಾರ ಕೈಗೊಂಡಿದ್ದೇವೆ.| ಸತೀಶ ರೆಡ್ಡಿ, ಶಾಸಕ, ಬೊಮ್ಮನಹಳ್ಳಿ ಬೆಂಗಳೂರು