ಚಿಕ್ಕೋಡಿ: ಕರೊನಾ ಸೋಂಕು ತಡೆಗಟ್ಟಲು ಸರ್ಕಾರವು ಜನತಾ ಕರ್ಫ್ಯೂ ಘೋಷಿಸಿರುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಪೊಲೀಸರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಕಂದಾಯ ಇಲಾಖೆಯ ನೌಕರರು ಸಂಘ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಪ್ರವೀಣ ಜೈನ್‌ಗೆ ಮನವಿ ಸಲ್ಲಿಸಿದರು.
ಜನತಾ ಕರ್ಫ್ಯೂ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಸೇರಿ ಕಂದಾಯ ಇಲಾಖೆಯ ವಿವಿಧ ವೃಂದದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ, ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ ಹರಿಜನ ಎಂಬುವರ ಮೇಲೆ ನಿಪ್ಪಾಣಿ ನಗರ ಪೊಲೀಸ್ ಠಾಣೆ ಪಿಎಸ್‌ಐ ಅನೀಲ ಕುಂಬಾರ ಹಲ್ಲೆ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲ್ಲೆಗೆ ಒಳಗಾದ ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ ಹರಿಜನ ಅವರಿಗೆ ನಿಪ್ಪಾಣಿ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸೀಮಾ ಗುಂಜಾಳ ಸರಿಯಾಗಿ ಸ್ಪಂದಿಸಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಕೆಳಹಂತದ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ
ಎಸ್.ವಿ.ಗವಿ ಎಚ್ಚರಿಸಿದರು. ಪಿ.ಐ.ಮಗದುಮ್ಮ ಆರ್.ಐ.ನಾಯಕ್, ಎಂ.ಎ.ನಾಗರಾಳೆ, ಪ್ರವೀಣ ಗಂಧ ಇತರರು ಇದ್ದರು.