ಚಾಮರಾಜನಗರ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಪೋಕ್ಸೋ ಪ್ರಕರಣಗಳಿಂದ ಮಕ್ಕಳನ್ನು ರಕ್ಷಿಸಿ ಕಾಪಾಡಿಕೊಳ್ಳುವುದು ಎಲ್ಲ ಪಾಲಕರ ಕರ್ತವ್ಯವಾಗಿದೆ ಎಂದು ವಕೀಲ ಮಹಾಲಿಂಗಸ್ವಾಮಿ ಸಲಹೆ ನೀಡಿದರು.
ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಸರೆ ಚಾರಿಟಬಲ್ ಟ್ರಸ್ಟ್ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ಪ್ರೀತಿ ಪ್ರೇಮಕ್ಕೆ ಮರುಳಾಗಿ ಹೆಚ್ಚು ಪೋಕ್ಸೋ ಪ್ರಕರಣಕ್ಕೆ ಕಾರಣವಾಗುತ್ತಿದೆ. ಮಕ್ಕಳನ್ನು ರಕ್ಷಿಸಿ ಸುರಕ್ಷಿತ ವಾತಾವರಣದಲ್ಲಿ ಬೆಳೆಸಲು ಸಹಾಯ ಮಾಡಲು ಪಾಲಕರು, ಶಿಕ್ಷಕರು ಮತ್ತು ಸಮಾಜ ಸಹಕಾರಿಯಾಗಬೇಕು ಎಂದರು. ಆಸರೆ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ. ಸುರೇಶ್ ಮಾತನಾಡಿ, ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡಬೇಕು. ಪ್ರತಿಯೊಬ್ಬರೂ ಜೀವನದಲ್ಲಿ ಗುರಿಯನ್ನು ಇಟ್ಟುಕೊಳ್ಳಬೇಕು. ತಂದೆ ತಾಯಿಯ ಮಾತನ್ನು ಕೇಳುವ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿಲಯ ಪಾಲಕಿ ಮಮತಾ, ವಿದ್ಯಾರ್ಥಿನಿಲಯದ ಅಶ್ವಿನಿ, ಸುಧಾಮಣಿ, ನಾಗೇಂದ್ರ, ಮಮತಾ, ಸುಚಿತ್ರ ಇತರರು ಹಾಜರಿದ್ದರು.