ಜಿಲ್ಲೆ

ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಸೂಚನೆ

ಹಾಸನ: ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ನಿಯೋಜನೆ ನಿಷೇಧ ಮತ್ತು ಅದರ ಪುನರ್ವಸತಿ ಅಧಿನಿಯಮ 2013ರ ಅನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಕಾಮಗಾರಿ ಪ್ರಾರಂಭಿಸಲು ಕ್ರಮ ವಹಿಸಲು ಸೂಚನೆ ನೀಡಿದರು. ಸದ್ಯಕ್ಕೆ ಬಾಡಿಗೆ ಕಟ್ಟಡದಲ್ಲಿ ವಿಶ್ರಾಂತಿ ಗೃಹ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೆ ಇಪಿಎಫ್ ಮತ್ತು ಪಿಎಫ್ ಹಣ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವಂತೆ ಸೂಚಿಸಿದರು.

ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ನೀಡಲಾಗಿದೆಯಾ? ಅವುಗಳ ಬಳಕೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಿದರಲ್ಲದೆ, ವರ್ಷಕ್ಕೆ ಮೂರು ಬಾರಿ ಸುರಕ್ಷಾ ಪರಿಕರಗಳನ್ನು ನೀಡುವಂತೆ ತಿಳಿಸಿದರು. ನಗರಗಳಲ್ಲಿ ಸ್ವಚ್ಛತೆ ಕಾಪಾಡಲು ನಿಗಾ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಶಂಕರ್ ರಾಜ್, ಪಳನಿ, ಭಾಸ್ಕರ್, ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಫೀರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಮತ್ತಿತರರು ಹಾಜರಿದ್ದರು.