ಬೇಲೂರು: ಮುಂದಿನ ಪೀಳಿಗೆ ಹಾಗೂ ಜೀವ ಸಂಕುಲಗಳ ಬದುಕಿಗಾಗಿ ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಾಗಿದೆ ಎಂದು ಸಮಾಜ ಸೇವಕ ಸಂತೋಷ್ ಹೇಳಿದರು.
ಶ್ರೀ ಲಕ್ಷ್ಮೀ ಮಂಗಳ ವಾದ್ಯ ಮತ್ತು ಕಲಾ ಸೇವಾ ಟ್ರಸ್ಟ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದೊಂದಿಗೆ ಪಟ್ಟಣದ ಹೊಯ್ಸಳ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪರಿಸರದ ಬಗೆಗಿನ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮನುಷ್ಯನ ಜೀವನದಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಪರಿಸರ ಮತ್ತು ಪ್ರಕೃತಿಗೆ ಮಾರಕವಾಗಿದೆ. ಜಾಗತಿಕ ತಾಪಮಾನ ಏರಿಕೆಯೂ ವಾತಾವರಣದ ಬದಲಾವಣೆಗೆ ಕಾರಣವಾಗುತ್ತಿದೆ. ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತಿ ವಹಿಸಬೇಕು. ಪರಿಸರ ರಕ್ಷಣೆ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಮನೆ, ಶಾಲಾ, ಕಾಲೇಜಿನ ಸುತ್ತಮುತ್ತಲಿನ ಸ್ಥಳಗಳಲ್ಲಿ, ಹೊಲ-ಗದ್ದೆಗಳಲ್ಲಿ ಗಿಡಗಳನ್ನು ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಬೇಕು. ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಪ್ರಬಂಧ ಸ್ಪರ್ಧೆಯಂತಹ ಚಟುವಟಿಕೆ ಹೆಚ್ಚು ಅವಶ್ಯಕವಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು, ಯುವ ಸಮುದಾಯ ನೈತಿಕ ಮೌಲ್ಯ ಕಳೆದುಕೊಳ್ಳುತ್ತಿದೆ. ಆದ್ದರಿಂದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೈತಿಕತೆಯ ಮೌಲ್ಯ, ಮಹತ್ವ ತಿಳಿಸುವ ಮೂಲಕ ಯುವ ಪೀಳಿಗೆಯನ್ನು ಸತ್‌ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೇವಲ ಪಠ್ಯದ ವಿಷಯ ಬೋಧಿಸುವುದು ಮಾತ್ರವಲ್ಲದೆ, ಪಠ್ಯೇತರ ಚಟುವಟಿಕೆ ಹಾಗೂ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ಲಕ್ಷ್ಮೀ ಮಂಗಳವಾದ್ಯ ಮತ್ತು ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ನರಸಿಂಹಸ್ವಾಮಿ ಮಾತನಾಡಿ, ಪರಿಸರ ಕಾಪಾಡ ಬೇಕಾದ ಮನುಷ್ಯರು ತಮ್ಮ ಸ್ವಾರ್ಥಕ್ಕಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್‌ನಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದರು.
ಹೊಯ್ಸಳ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರವಿಕುಮಾರ್, ಮುಖ್ಯ ಶಿಕ್ಷಕ ಮುರುಳಿಧರ್, ಶ್ರೀ ಲಕ್ಷ್ಮೀ ಮಂಗಳ ವಾದ್ಯ ಮತ್ತು ಕಲಾ ಸೇವಾ ಟ್ರಸ್ಟ್ ಕಾರ್ಯದರ್ಶಿ ಅನಿಲ್‌ಕುಮಾರ್, ನಿರ್ದೇಶಕರಾದ ಮೋಹನ್, ಕೇಶವಮೂರ್ತಿ, ವಿಷ್ಣು ಪ್ರಸಾದ್ ಸೇರಿದಂತೆ ಶಿಕ್ಷಕರಿದ್ದರು.