ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ  
ಜಿಲ್ಲೆ

ಪ್ರಚಾರಕ್ಕಾಗಿ ಇಲ್ಲ ಸಲ್ಲದ ಆರೋಪ

ಚಿಕ್ಕಮಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಪ್ರತಿ ಮೂರು ತಿಂಗಳಿಗೊಮ್ಮೆ ಯಾವುದಾದರೂ ಒಂದು ವಿಚಾರವನ್ನು ಇಟ್ಟುಕೊಂಡು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದೀಗ ಚುನಾವಣಾ ಆಯೋಗದ ವಿರುದ್ಧವೇ ಸುಳ್ಳು ಆರೋಪ ಮಾಡುವ ಮೂಲಕ ಪ್ರಚಾರ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಒತ್ತಾಯಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ಮೋಸ ಮಾಡಿದೆ. ಬಿಜೆಪಿ ಪರ ನಿಂತಿದೆ ಎಂದು ಆರೋಪಿಸುತ್ತಿದ್ದಾರೆ. ಸೋತವರು ಗೆದ್ದವರನ್ನು ದೂರುವುದು ಸ್ವಾಭಾವಿಕ. ಆದರೆ ರಾಹುಲ್ ಗಾಂಧಿ ಇಂತ ಕೆಲಸ ಮಾಡಬಾರದಿತ್ತು ಎಂದರು.

ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಅಂತರದಿಂದ ಗೆದ್ದವರು ಯಾರಾದರೂ ಇದ್ದರೆ ಅದು ಕಾಂಗ್ರೆಸ್ ನಾಯಕರು ಮಾತ್ರ. ಅಸ್ಸಾಂ ಕಾಂಗ್ರೆಸ್ ಸಂಸದರೊಬ್ಬರು 10.12 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಇರುವ 14 ಲಕ್ಷ ಮತಗಳಲ್ಲಿ 10.12 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಇನ್ನು ತಮಿಳುನಾಡಿನ ಶಶಿಕಾಂತ್ ಸೆಂಥಿಲ್ ಅವರು 5.72 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ. ಇವರೆಲ್ಲರೂ ಮೋಸದಿಂದಲೇ ಇಷ್ಟು ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ನಾವು ಆರೋಪಿಸಬಹುದೇ ಎಂದು ಪ್ರಶ್ನಿಸಿದರು.

ಕರ್ನಾಟಕದ ವಿಧಾನಸಭಾ ಚುನಾವಣೆ ವಿಷಯಕ್ಕೆ ಬಂದರೆ ಕಾಂಗ್ರೆಸ್ ನ 37 ಶಾಸಕರು 50 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. 49 ಕಾಂಗ್ರೆಸ್ ಶಾಸಕರು 25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಹೀಗಿರುವಾಗ ನಿಮಗೆ ಬಂದ ಮತಗಳು ಮೋಸ ಮಾಡಿ ಬಂದ ಮತಗಳೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗಿದೆ. ಈಗ ರಾಹುಲ್ ಗಾಂಧಿ ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಪ್ರತಿ ಮೂರು ತಿಂಗಳಿಗೊಮ್ಮೆ ಹೊಸ ಹೊಸ ವಿಚಾರಗಳನ್ನು ಇಟ್ಟುಕೊಂಡು ಬಂದು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಭಾರತ ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಅಸಂಬದ್ಧ ಹೇಳಿಕೆಗಳನ್ನು ನೀಡಿದರು. ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಪರವಾಗಿ ನಿಂತರು. ಈಗ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎನ್ನುತ್ತಿದ್ದಾರೆ. ಹಿಂದೆ ಸ್ವಲ್ಪ ದಿನ ಸಂವಿಧಾನದ ಪುಸ್ತಕ ಇಟ್ಟುಕೊಂಡು ಓಡಾಡುತ್ತಿದ್ದರು. ಈಗ ಅವರ ಬಳಿ ಸಂವಿಧಾನದ ಪುಸ್ತಕ ಕಾಣುತ್ತಿಲ್ಲ ಎಂದು ಲೇವಡಿ ಮಾಡಿದರು.

ಹಿಂದಲ್ಲಾ ದೇಶದಲ್ಲಿ ಒಬ್ಬರು ಹೇಳಿದಂತೆ ಎಲ್ಲವೂ ನಡೆಯುತ್ತಿತ್ತು. ಆದರೆ ಇಂದು ದೇಶ ಸಂವಿಧಾನ ಬದ್ಧವಾಗಿ ನಡೆಯುವ ವ್ಯವಸ್ಥೆಗೆ ಬರುತ್ತಿದೆ. ಇಂಥ ಸಂದರ್ಭದಲ್ಲಿ ತಾವು ಪ್ರಚಾರದಲ್ಲಿ ಇರಬೇಕು ಎಂಬ ಕಾರಣಕ್ಕೆ ಸುಳ್ಳು ಆರೋಪಗಳನ್ನು ಮಾಡುವುದು ಸರಿಯಲ್ಲ. ಇದನ್ನೇ ಮುಂದುವರಿಸಿದರೆ ಜನ ನಿಮ್ಮ ಬಗ್ಗೆಯೇ ವಿಚಾರ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದರು.