ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಡಾ.ಮೂರ್ತಿ ಮಾತನಾಡಿದರು. ಯತ್ತಂಬಾಡಿ ಪುಟ್ಟರಾಮು, ಮಹದೇವಸ್ವಾಮಿ, ಲಿಂಗಪಟ್ಟಣ ಗಂಗಾಧರ್ ಇತರರು ಇದ್ದರು. 
ಜಿಲ್ಲೆ

ಪ್ರಜಾಧ್ವನಿ ಯಾತ್ರೆ ಮೂಲಕ ಜನರಲ್ಲಿ ಜಾಗೃತಿ

ಮಳವಳ್ಳಿ: ಕೇಂದ್ರ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ಸೂಕ್ತ ಅನುದಾನ ನೀಡದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಇಂತಹ ಹಲವು ಅನ್ಯಾಯಗಳು ರಾಜ್ಯಕ್ಕೆ ಆಗಿರುವ ಕುರಿತು ಪ್ರಜಾಧ್ವನಿ ಯಾತ್ರೆಯ ಮೂಲಕ ಜನರಿಗೆ ತಿಳಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಡಾ.ಮೂರ್ತಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಜಾಧ್ವನಿ ಯಾತ್ರೆ ಕುರಿತು ಬುಧವಾರ ಏರ್ಪಡಿಸಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆಯಿಂದ ದೇಶದ ಜನರಿಗೆ ಕಾಂಗ್ರೆಸ್ ಹೋರಾಟ ಕುರಿತು ಮನವರಿಕೆಯಾಗಿದೆ. ಜತೆಗೆ ಪಕ್ಷ ಸಂಘಟನೆಗೆ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ರಾಜ್ಯದಲ್ಲಿ ನಿರುದ್ಯೋಗ ಸೇರಿದಂತೆ ಹಲವಾರು ಸಮಸ್ಯೆಗಳು ಉಂಟಾಗಿವೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಾಗಲಿದೆ ಎಂದರು.

ಫೆ.12ರಂದು ತಾಲೂಕಿನ ವ್ಯಾಪ್ತಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಪಕ್ಷವನ್ನು ಅಧಿಕಾರಕ್ಕೆ ತರಬೇಕಿರುವುದೇ ಪ್ರಮುಖ ಗುರಿಯಾಗಿದೆ. ಹಾಗಾಗಿ ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳನ್ನು ಬದಿಗೊತ್ತಿ ಒಮ್ಮತದಿಂದ ಯಾತ್ರೆ ಯಶಸ್ವಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್ ಜಿಲ್ಲಾ ಮಾಜಿ ಉಪಾಧ್ಯಕ್ಷ ಯತ್ತಂಬಾಡಿ ಪುಟ್ಟರಾಮು, ಜಿಪಂ ಮಾಜಿ ಸದಸ್ಯ ಮಹದೇವಸ್ವಾಮಿ, ಡಿಕೆಶಿ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಲಿಂಗಪಟ್ಟಣ ಗಂಗಾಧರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಚೌಡೇಶ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚೊಟ್ಟನಹಳ್ಳಿ ರಮೇಶ್, ತಾಪಂ ಮಾಜಿ ಸದಸ್ಯ ದೊಡ್ಡಯ್ಯ ಇತರರು ಇದ್ದರು.