ಹಾಸನ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಕಾರ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯ ಡಾ.ತೇಜಸ್ವಿ ಅವರು ಸಲಹೆ ನೀಡಿದರು.
ಹಾಸನ ತಾಲೂಕಿನ ಕಾರ್ಲೆ ಗ್ರಾಮ ಪಂಚಾಯಿತಿಯಲ್ಲಿ ಇತ್ತಿಚೇಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರೇಗಾ ಕೂಲಿಕಾರರಿಗೆ ಆಯೋಜಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿದರು ಬಳಿಕ ಮಾತನಾಡಿ ಪ್ರತಿಯೊಬ್ಬರು ದಿನ ನಿತ್ಯ ವ್ಯಾಯಮ, ಯೋಗಾಸನ ಮಾಡುವುದರಿಂದ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಯಾವುದೇ ರೀತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ತಕ್ಷಣ ನಿಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಿ ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಹಾಸನ ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಲೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಸೀಮಾ ಮಾತನಾಡಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಎಲ್ಲರೂ ಇದರಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯದ ಬಗ್ಗೆ ಚಿಕಿತ್ಸೆ ಪಡೆದುಕೊಂಡು ಆರೋಗ್ಯವಂತರಾಗುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ಹರೀಶ್, ಕಾರ್ಲೆ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ ರಾಮಕೃಷ್ಣ, ಹಾಗೂ ಎನ್.ಎಸ್. ಎಸ್ ಶಿಬಿರ ಘಟಕದ ಶಿಕ್ಷಕಿ ಅನುಸೂಯ ಇತರರು ಇದ್ದರು.