ಜಿಲ್ಲೆ

ಪ್ರಥಮ ದರ್ಜೆ ಸಹಾಯಕ ಪರೀಕ್ಷೆ 23ಕ್ಕೆ

ಬೀದರ್: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ವತಿಯಿಂದ ಜ.23 ಮತ್ತು 24ರಂದು ನಡೆಯುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ವ್ಯವಸ್ಥಿತ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಡಿಸಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಪರೀಕ್ಷಾ ವೇಳೆ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಬರುವ ಅಭ್ಯರ್ಥಿಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

23 ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯುವ ಒಂದು ಕೇಂದ್ರದಲ್ಲಿ 683 ಅಭ್ಯರ್ಥಿ ಪರೀಕ್ಷೆ ಬರೆಯಲಿದ್ದು, 24ಕ್ಕೆ 27 ಕೇಂದ್ರಗಳಲ್ಲಿ 9526ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ಸಮಯದಲ್ಲಿ ಕೇಂದ್ರದ ಸುತ್ತ 144ರ ಕಲಂನ್ವನಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ. ಕೇಂದ್ರ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಝರಾಕ್ಸ್ ಕೇಂದ್ರ ಮುಚ್ಚುವಂತೆ ಆದೇಶಿಸಲಾಗುವುದು. ಯಾವುದೇ ಲೋಪಕ್ಕೆ ಅವಕಾಶವಿಲ್ಲದ ರೀತಿ ಪರೀಕ್ಷೆ ಜರುಗಿಸಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಡಿಡಿಪಿಐ ಗಂಗಣ್ಣ ಸ್ವಾಮಿ, ಜಿಲ್ಲಾ ಖಜಾನಾಧಿಕಾರಿ ಶಂಭುರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹ್ಮದ್ ಗುಲ್ಶನ್ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಮೇಲ್ವಿಚಾರಕರು ಪಾಲ್ಗೊಂಡಿದ್ದರು.