ಜಿಲ್ಲೆ

ಪ್ರಾಥಮಿಕ ಹಂತದಲ್ಲೇ ಸಮಸ್ಯೆ ಬಗೆಹರಿಸಿ : ಜಿಲ್ಲಾಧಿಕಾರಿ ಆರ್.ಲತಾ ತಾಕೀತು

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ


ಜನರ ಸಮಸ್ಯೆ ಕೂಲಂಕಷವಾಗಿ ಆಲಿಸಿ, ಪ್ರಾಥಮಿಕ ಹಂತದಲ್ಲಿಯೇ ಬಗೆಹರಿಸಲು ಕ್ರಮ ವಹಿಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಾಕೀತು ಮಾಡಿದರು.
ದೇವನಹಳ್ಳಿ ಡಿಸಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ 4ನೇ ತ್ರೈಮಾಸಿಕ ಜಿಲ್ಲಾಮಟ್ಟದ ಜಾಗೃತಿ ಸಭೆಯಲ್ಲಿ ಮಾತನಾಡಿದರು. ತಾಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಸಬೇಕು ಎಂದು ಸೂಚಿಸಿದರು.
ಆಗಾಗ್ಗೆ ಸಭೆ ನಡೆಸುವುದರಿಂದ ನಿವೇಶನ, ರಸ್ತೆ, ಸ್ಮಶಾನ ಭೂಮಿ ಮಂಜೂರು, ದೌರ್ಜನ್ಯ ಪ್ರಕರಣ ಸೇರಿ ಹಲವಾರು ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದು. ಸಮಸ್ಯೆಗಳಿರುವ ಸ್ಥಳಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯೊಂದಿಗೆ ಭೇಟಿ ನೀಡಬೇಕು. ಸ್ಥಳೀಯಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಜಿಲ್ಲಾ ಹಂತದಲ್ಲಿ ಪ್ರಸ್ತಾಪಿಸಬೇಕು ಎಂದು ತಿಳಿಸಿದರು.
ಮಾನದಂಡ ಅವಶ್ಯ: ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯ ತಲುಪಿಸಬೇಕು. ಇದಕ್ಕೂ ಮುನ್ನ ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡ ಅನುಸರಿಸಬೇಕು, ಸ್ಮಶಾನ ಭೂಮಿ ಮಂಜೂರು, ಪರಿಶಿಷ್ಟ ಜಾತಿ, ಪಂಗಡದ ರೈತರ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು, ವಸತಿರಹಿತರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಆಶ್ರಯ ನಿವೇಶನ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ನಿರ್ದೇಶಿಸಿದರು.
ಹೊಸಕೋಟೆ ತಾಲೂಕಿನಲ್ಲಿ ಬುದ್ಧವಿಹಾರ ನಿರ್ಮಾಣ ಮಾಡಲು ವಾಗಟ ಗ್ರಾಮದ ಸರ್ಕಾರಿ ಗೋಮಾಳದ ಜಮೀನಿನಲ್ಲಿ
5 ಎಕರೆ ಜಮೀನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಠಿಣ ಕ್ರಮ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ
ಕಾನೂನು ಕ್ರಮ ಜರುಗಿಸಿ, ನ್ಯಾಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ಸಭೆಗೆ ತಿಳಿಸಿದರು.

ಸೌಕರ್ಯ ಕಲ್ಪಿಸಲು ಸೂಚನೆ : ಹಕ್ಕುಪತ್ರ ವಿತರಣೆ ಬಾಕಿ ಇರುವ ಫಲಾನುಭವಿಗಳಿಗೆ ನಿಯಮಾನುಸಾರ ವಿತರಿಸಲು ಕ್ರಮವಹಿಸಬೇಕು, ಸಾರ್ವಜನಿಕರು ಭೇಟಿ ನೀಡುವ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಚೇರಿಗಳಲ್ಲಿ ಶೌಚಗೃಹ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.