ಬಾಗಲಕೋಟೆ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಸ್ಥಾಪಿಸಲಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಚೇರಿಗೆ ಚಾಲನೆ ನೀಡಿ ನಂತರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರಕಾರದ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಪ್ರತಿ ಕುಟುಂಬಗಳಿಗೆ ವಾರ್ಷಿಕ 60 ಸಾವಿರ ರೂ.ಗಳವರೆಗೆ ಅನುಕೂಲವಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ ಡಾ.ಎಸ್.ಎಚ್.ತೆಕ್ಕೆನ್ನವರ ಅಧ್ಯಕ್ಷತೆಯಲ್ಲಿ 5 ಜನ ಉಪಾಧ್ಯಕ್ಷರು ಹಾಗೂ 15 ಜನ ಸದಸ್ಯರು ಇದ್ದಾರೆ. ಬಿಟ್ಟು ಹೋಗಿರುವ ಫಲಾನುಭವಿಗಳ ಪಟ್ಟಿ ಮಾಡಿಕೊಂಡು ಯೋಜನೆ ಲಾಭ ಅರ್ಹ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ಸರಕಾರ ಯಾವುದೇ ಜಾತಿ ಭೇದವಿಲ್ಲದೇ ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಡಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಮಹಿಳಾ ಸಬಲೀಕರಣಕ್ಕೆ ಅರ್ಥ ತಂದ ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 8.24 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರಿಂದ ಒಟ್ಟು 254.46 ಕೋಟಿ ರೂ.ಗಳ ಸಾರಿಗೆ ಆದಾಯ ಸಂಗ್ರಹವಾಗಿದೆ. ಈ ಯೋಜನೆಯಿಂದ ಪ್ರತಿ ದಿನ 30 ಲಕ್ಷದಷ್ಟು ಪ್ರಯಾಣಿಕರು ಹೆಚ್ಚಳವಾಗಿದೆ ಎಂದರು.
ಹಸಿದವರ ಹೊಟ್ಟೆ ತಣಿಸುತ್ತಿರುವ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿಯ ಬದಲಾಗಿ ಪ್ರತಿ ಫಲಾನುಭವಿಗಳಿಗೆ 170 ರೂ. ಗಳಂತೆ ಇಲ್ಲಿಯವರೆಗೆ ಒಟ್ಟು 225.05 ಕೋಟಿ ರೂ.ಗಳಷ್ಟು ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 4,20,797 ಜನ ನೋಂದಾಯಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ 4.12 ಲಕ್ಷ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದರೆ, ಯುವ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 8047 ಜನ ಲಾಭ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಜೆ.ಟಿ.ಪಾಟೀಲ ಮಾತನಾಡಿ ಈಡೀ ದೇಶದಲ್ಲಿಯೇ ಮಾದರಿಯಾಗುವ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳ ಸಮರ್ಪಕ ಅನುಷ್ಠಾನದಲ್ಲಿ ಪ್ರಾಧಿಕಾರದ ಜವಾಬ್ದಾರಿ ಬಹಳಷ್ಟು ಇದ್ದು, ಅರ್ಹ ಎಲ್ಲ ಫಲಾನುಭವಿಗಳಿಗೆ ಯೋಜನೆ ಲಾಭ ದೊರೆಯುವಂತಾಗಬೇಕು ಎಂದು ತಿಳಿಸಿದರು.
ರಾಜ್ಯ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ ಮಾತನಾಡಿ ಒಂದು ವರ್ಷ ಒಂದು ಯೋಜನೆಗೆ 60 ಸಾವಿರ ಕೋಟಿ ರೂ.ಗಳಷ್ಟು ಅನುಧಾನ ಖರ್ಚು ಮಾಡುತ್ತಿದೆ. ಕೆಳಮಟ್ಟದಲ್ಲಿರುವವರನ್ನು ಮೇಲೆತ್ತುವ ಕೆಲಸ ಈ ಯೋಜನೆಗಳಿಂದ ಆಗುತ್ತಿದೆ. ಈ ಯೋಜನೆಗಳು ಸಾಮಾಜಿಕ, ಆರ್ಥಿಕವಾಗಿ ಬೆಳೆಯುವದಷ್ಟೇ ಅಲ್ಲ ಶೈಕ್ಷಣಿಕವಾಗಿ ಅನುಕೂಲವಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಎಸ್.ಎಚ್.ತೆಕ್ಕೆನ್ನವರ ಮಾತನಾಡಿದರು. ಪ್ರಾರಂಭದಲ್ಲಿ ಜಿ.ಪಂ ಸಿಇಓ ಶಶೀಧರ ಕುರೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ನಗರಸಭೆ ಅಧ್ಯಕ್ಷೆ ಸಚಿತಾ ಲೆಂಕನ್ನವರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್. ಬಸರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.