ಜಿಲ್ಲೆ

ಪ್ರೋತ್ಸಾಹ ಧನ 1ರಿಂದ 2ಲಕ್ಷ ರೂ.ಗೆ ಹೆಚ್ಚಳ

ಚಿತ್ರದುರ್ಗ: ಐಐಟಿ, ಐಐಎಂ, ಐಐಎಸ್ಸಿ, ಎನ್‌ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಉನ್ನತ ಶೈಕ್ಷಣಿಕ ಸಾಧನೆಗೆ ಸಹಕಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪರೀಕ್ಷೆ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ, ಮ್ಯಾನೇಜ್‌ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್‌ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25ಲಕ್ಷ ರೂ. ಶುಲ್ಕದವರೆಗೂ ಸಹಾಯಧನ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಎಂಬಿಬಿಎಸ್ ಪದವಿ ಪಡೆಯುತ್ತಿರುವ ಎಸ್ಸಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ. 60ಕ್ಕೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದರೆ, ಅವರಿಗೂ 25 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶ ಮನಗಂಡು ಮಹತ್ವದ ನಿರ್ಧಾರ ಸರ್ಕಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಪಡೆಯಬೇಕೆಂಬ ಈ ಸಮುದಾಯಗಳ ವಿದ್ಯಾರ್ಥಿಸಮೂಹದ ಕನಸ್ಸು ನನಸಾಗಲಿದೆ. ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಿ, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಸಚಿವರು ಆಶಿಸಿದ್ದಾರೆ.