ಗೌರಿಬಿದನೂರು: ತಾಲೂಕಿನಲ್ಲಿ ಫೆ.27 ರಿಂದ ಮಾ.2ರವರೆಗೆ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲ ಅಧಿಕಾರಿಗಳ ಸಹಕಾರ ಅಗತ್ಯ ಎಂದು ತಹಸೀಲ್ದಾರ್ ಎಚ್.ಶ್ರೀನಿವಾಸ್ ತಿಳಿಸಿದರು.ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ನಗರ ಪ್ರದೇಶದಲ್ಲಿ ನಾಲ್ಕು ದಿನ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮೂರು ದಿನ ಪಲ್ಸ್ ಪೊಲೀಯೂ ಲಸಿಕೆ ಹಾಕಲಾಗುವುದು. ಇದಕ್ಕಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು, ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಪ್ಪದೇ ಭಾಗವಹಿಸಿಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಶಿಕ್ಷಣ ಇಲಾಖೆಯಿಂದ ಒಂದು ದಿನ ಜಾಥಾ ಕಾರ್ಯಕ್ರಮವನ್ನು ನಡೆಸಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ತಾಲೂಕು ಅರೋಗ್ಯಾಧಿಕಾರಿ ಡಾ.ಓ.ರತ್ನಮ್ಮ ಮಾತನಾಡಿ, ತಾಲೂಕಿನಾದ್ಯಂತ 5 ವರ್ಷದೊಳಗಿನ ಮಕ್ಕಳಿಗಾಗಿ ಲಸಿಕಾ ಕೇಂದ್ರಗಳು ಸ್ಥಾಪಿಸಲಾಗುತ್ತದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸರ್ಕಾರಿ ಆಸ್ಪೆತ್ರೆ ಹಾಗೂ ಇತರ ಸಾರ್ವಜನಿಕ ಆಸ್ಪತ್ರೆಗಳು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು.
ತಾಲೂಕು ನೋಡಲ್ ಅಧಿಕಾರಿ ಶಿವಕುಮಾರ್, ವೃತ್ತ ನಿರೀಕ್ಷಕ ಎಂ.ಡಿ.ಶಶಿಧರ್, ನಗರಸಭೆ ಪೌರಾಯುಕ್ತ ಸತ್ಯನಾರಾಯಣ್, ಸಿಡಿಪಿಒ ವೆಂಕಟೇಶ್, ನಗರಸಭೆ ಅಧಿಕಾರಿ ಸುರೇಶ್ ಮತ್ತಿತರರು ಇದ್ದರು.