ಬಾಗಲಕೋಟೆ: ಜಿಲ್ಲೆಯ ತೇರದಾಳ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಫೆ.೨೬ ರಂದು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಹೇಳಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಕಾರ್ಯಕ್ರಮಗಳ ಪೂರ್ವ ಸಿದ್ದತೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫೆ.೨೬ ರಂದು ಬನಹಟ್ಟಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಹಿಪ್ಪರಗಿ ಗ್ರಾಮದ ಸಂಗಮೇಶ್ವರ ದೇವಸ್ಥಾನಕ್ಕೆ ಭೇಟಿ, ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ, ಕುಲಹಳ್ಳಿ-ಹುನ್ನೂರ ಹಾಗೂ ವೆಂಕಟೇಶ್ವರ ಏತ ನೀರಾವರಿ ಯೋಜನೆಯ ಚಾಕವೆಲ್‌ಗಳ ಉದ್ಘಾಟನೆ, ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ಬನಹಟ್ಟಿಯ ಎಸ್.ಆರ್.ಎ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದರು.
ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ಸಿದ್ದತೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಮಖಂಡಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದ ರೂಪುರೇಷೆಗಳ ಕುರಿತು ಸಭೆ ನಡೆಸಿ, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕೆಲಸದ ಜವಾಬ್ದಾರಿಗಳನ್ನು ವಹಿಸಿಕೊಡಲು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿಇಒ ಟಿ.ಭೂಬಾಲನ್, ಯುಕೆಪಿಯ ಮಹಾ ವ್ಯವಸ್ಥಾಪಕ ಭಾನುವರ್‌ಸಿಂಗ್ ಮೀನಾ, ವಿಶೇಷ ಜಿಲ್ಲಾಽಕಾರಿ ಸೋಮಲಿಂಗ ಗೆಣ್ಣೂರ, ಅಪರ ಜಿಲ್ಲಾಽಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿಗಳಾದ ಶ್ವೇತಾ ಬೀಡಿಕರ, ಸಂತೋಷ ಕುಲಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ ಅಮರೇಶ ಪಮ್ಮಾರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಹಾಗೂ ಇತರರು ಉಪಸ್ಥಿತರಿದ್ದರು.