ಚಾಮರಾಜನಗರ: ಬಂಡೀಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಿಬಾರದು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು, ಶ್ರೀಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಬಂಡಿಪುರ ರಾತ್ರಿ ವೇಳೆ ಸಂಚಾರಕ್ಕೆ ಅನುಮತಿ ನೀಡಬಾರದು. ಕೇರಳ ಸರ್ಕಾರ ಮತ್ತು ವಯನಾಡಿನ ಸಂಸದೆ ಪ್ರಿಯಾಂಕ ವಾದ್ರಾ ಅವರ ಒತ್ತಡಕ್ಕೆ ಮಣಿದು ರಾಜ್ಯಸರ್ಕಾರ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ, ಅಕ್ರಮ ಚಟುವಟಿಕೆ ಹಾಗೂ ಕಾಡುಪ್ರಾಣಿಗಳ ನಾಶಕ್ಕೆ ದಾರಿಮಾಡಿಕೊಟ್ಟಂತಾಗುತ್ತದೆ. ಒಂದು ವೇಳೆ ಬಂಡಿಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ ಮುಂದಿನ ದಿನದಲ್ಲಿ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಆನ್‌ಲೈನ್ ಗೇಮ್ಗಳ ಹಾವಳಿ ಹೆಚ್ಚಾಗಿದ್ದು, ಸರ್ಕಾರ ಯುವಕರ ರಕ್ಷಣೆಗೆ ಮುಂದಾಗಬೇಕು. ಕ್ರಿಕೆಟ್ ಬೆಟ್ಟಿಂಗ್ ದಂದೆಯನ್ನು ತಕ್ಷಣ ನಿಲ್ಲಿಸಬೇಕು. ಮಲಿಯೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಚಿನ್ನದ ಅವ್ಯವಹಾರದಲ್ಲಿ ಮೋಸ ಹೋಗಿದ್ದ ರೈತರಿಗೆ ನ್ಯಾಯ ದೊರಕಿಸಬೇಕು. ಕೃಷಿ ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ ಮರು ಜಾರಿ ಆಗಬೇಕು. ಹಾಲಿನ ಪ್ರೋತ್ಸಾಹ ಧನ ಸುಮಾರು 800 ಕೋಟಿಯಷ್ಟು ಹಣವನ್ನು ರಾಜ್ಯ ಸರ್ಕಾರ ನೀಡಬೇಕು. ಜಿಲ್ಲೆಯ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರ ಸಂಘದ ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ, ರಾಜ್ಯ ಸಂಚಾಲಕ ಹನುಮಯ್ಯ, ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಪ್ರಕಾಶ್ ಗಾಂಧಿ, ಜಿಲ್ಲಾ ಉಪಾಧ್ಯಕ್ಷ ಮಲಿಯೂರು ಮಹೇಂದ್ರ, ಊರ್ದಳ್ಳಿ ರಾಮಣ್ಣ, ಗುರುವಿನಪುರ ಮೋಹನ್ ಚಂದ್ರ, ಕೆರೆಹುಂಡಿ ಶಿವಣ್ಣ, ಸ್ಯಾಂಡ್ರಳ್ಳಿ ಬಸವರಾಜ್, ಮಲ್ಲು ಅರಳಿಕಟ್ಟೆ, ಪ್ರಭುಸ್ವಾಮಿ, ಮಹದೇವಪ್ಪ, ಹೊನ್ನಹಳ್ಳಿ ಬಸವಣ್ಣ, ನಂದೀಶ್, ಶ್ರೀಕಂಠ, ಶಿವಪಾದ ಹಾಗೂ ಇತರರು ಭಾಗವಹಿಸಿದ್ದರು.