ದಾವಣಗೆರೆ: ನಮೋ ಡ್ರೋಣ್ ದೀದಿ ಎಂದು ಹೆಸರಿಸಲಾದ ನೂತನ ಯೋಜನೆ ದೇಶದಲ್ಲಿ ಬಹುದೊಡ್ಡ ಬದಲಾವಣೆ ತರಲಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭವಿಷ್ಯದಲ್ಲಿ ದೇಶದ ಕೃಷಿ ಕ್ಷೇತ್ರ ಸಂಪೂರ್ಣ ತಾಂತ್ರಿಕತೆಗಳ ಮೇಲೆ ನಡೆಯಲಿದೆ. ಇದರ ಭಾಗವಾಗಿ ನೂತನ ಯೋಜನೆಯಡಿ ಬೆಳೆಗಳಿಗೆ ಔಷಧ ಸಿಂಪರಣೆಗಾಗಿ ದೇಶದ ಸ್ತ್ರೀಶಕ್ತಿ ಸಂಘಗಳಿಗೆ ಶೇ.80ರಷ್ಟು ಸಹಾಯಧನದೊಂದಿಗೆ 15 ಸಾವಿರ ಡ್ರೋಣ್ ನೀಡಲಾಗುತ್ತಿದೆ. ಇದರ ಸಹಾಯದಿಂದ ದಿನಕ್ಕೆ 100 ಎಕರೆ ಪ್ರದೇಶದಲ್ಲಿ ನ್ಯಾನೋ ಯೂರಿಯಾ ಸಿಂಪರಣೆ ಮಾಡಬಹುದಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶದ ಬಡವರಿಗಾಗಿ 4 ಕೋಟಿಗೂ ಅಧಿಕ ಕುಟುಂಬಗಳಿಗೆ ಶಾಶ್ವತ ಸೂರು ನಿರ್ಮಿಸಲಾಗಿದೆ. ಈ ಹಿಂದೆ 3.50 ಲಕ್ಷ ಮನೆ ನಿರ್ಮಿಸಲಾಗಿತ್ತು. ಮನೆಗಳ ನಿರ್ಮಾಣದೊಂದಿಗೆ ಕೇಂದ್ರ ಸರ್ಕಾರ ಜನಪರ ಕಾರ್ಯಕ್ರಮ ನಡೆಸುತ್ತಾ ಬಂದಿದೆ ಎಂದರು.
ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದರು.
ಸಂಸದ ಡಾ.ಜಿ.ಎಂ. ಸಿದ್ದೇಶ್ವರ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿಯ ಚಿತ್ರಣ ಬದಲಾಗಿದೆ ಎಂದರು.
ಉಜ್ವಲಾ 2.0 ಯೋಜನೆ ಅಡಿ ರಾಜ್ಯದಲ್ಲಿ ಮತ್ತೆ ನಾಲ್ಕು ಲಕ್ಷ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಪ್ರೊ.ಎನ್. ಲಿಂಗಣ್ಣ, ಎಸ್.ವಿ. ರಾಮಚಂದ್ರ, ಎಂ. ಬಸವರಾಜನಾಯ್ಕ, ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿ ಸ್ವಾಮಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ್ ಇತರರಿದ್ದರು.
ಕಾರ್ಯಕ್ರಮದಲ್ಲಿ ಸಚಿವರು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು. ಸಂಕಲ್ಪಯಾತ್ರೆ ಅಂಗವಾಗಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು.